ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಲುಕಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವ ಕಾಂಗ್ರೆಸ್ ರಾಜ್ಯ ಸರ್ಕಾರ ಹಾಗೂ ಹೈಕಮಾಂಡ್ ನಿರ್ಧಾರವನ್ನು ಖಂಡಿಸಿ, ಅವರ ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ನಡೆದ 187 ಕೋಟಿ ರೂಪಾಯಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನ ಸೌಧದಲ್ಲೇ ಅಂದಿನ ಸಿಎಂ ಸಿದ್ದರಾಮಯ್ಯ ಅವರು ಹಗರಣ ನಡೆದಿರುವುದು ನಿಜ ಎಂದು ಒಪ್ಪಿಕೊಂಡಿದ್ದರು. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಜೈಲಿಗೂ ಹೋಗಿ ಬಂದಿದ್ದಾರೆ.
ಇಷ್ಟೆಲ್ಲಾ ನಡೆದಿದ್ದರೂ ಯಾವ ನೈತಿಕತೆಯ ಆಧಾರದ ಮೇಲೆ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಹಣ ನೀಡಿ ಮಂತ್ರಿಗಿರಿ ಪಡೆದು ಎಷ್ಟೇ ದೊಡ್ಡ ಹಗರಣ ಮಾಡಿದರೂ ನಡೆಯುತ್ತದೆ ಎಂಬ ಸಂದೇಶವನ್ನು ಕಾಂಗ್ರೆಸ್ ನೀಡುತ್ತಿದೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಮುಖ್ಯಮಂತ್ರಿಗಳು ಕೂಡಲೇ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು.
