ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭಾರಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಖಂಡಿಸಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ನಿಗಮದ ಹಣ ಲೂಟಿಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು ಹೋರಾಟವನ್ನು ಇನ್ನಷ್ಟು ಉಗ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭಾರಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಖಂಡಿಸಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಬಿ.ಜೆ.ಪಿ. ರಾಜ್ಯ ವಕ್ತಾರ ಹಾಗೂ ನ್ಯಾಯವಾದಿ ಎಂ. ಬಿ. ಜೀರಲಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹187 ಕೋಟಿಗೂ ಅಧಿಕ ಮೊತ್ತದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಂಡಿದೆ. ನಿಗಮದ ವ್ಯಾಪ್ತಿಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಅಕ್ರಮ ನಡೆದಿದ್ದರೂ ಸರ್ಕಾರ ಮೌನ ವಹಿಸಿರುವುದು ಖಂಡನೀಯ ಎಂದಿದ್ದಾರೆ. ಅಕ್ರಮದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಪ್ರಕರಣದಲ್ಲಿ ಶಾಮೀಲಾಗಿರುವ ಪ್ರಭಾವಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಒಂದು ವೇಳೆ ಸರ್ಕಾರ ಮತ್ತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ತಕ್ಷಣ ಕ್ರಮ ವಹಿಸದಿದ್ದರೆ, ಈ ಅಹೋರಾತ್ರಿ ಧರಣಿ ಹಾಗೂ ಉಗ್ರ ಹೋರಾಟವು ರಾಜ್ಯದ ತಾಲೂಕು ಮತ್ತು ಹಳ್ಳಿ ಹಳ್ಳಿಗಳಿಗೂ ವ್ಯಾಪಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಸಿದ್ಧರಾಮಯ್ಯನವರ ಕಾಲದಲ್ಲಿಯೂ ಮತ್ತು ಡಿ.ಕೆ.ಶಿವಕುಮಾರ್ ಸರ್ಕಾರಗಳು ರಿಕಾರ್ಡ್ ಬ್ರೇಕ್ ಭ್ರಷ್ಟಾಚಾರವನ್ನು ಮಾಡುತ್ತಿವೆ. ಕೇಸ್ ಇರುವ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಡಿ.ಕೆ.ಶಿವಕುಮಾರ್ ಮತ್ತೇ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಂಡು ಹೊಸ ಇತಿಹಾಸವನ್ನೇ ಬರೆದಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಅವರು, ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾದ ಹಣವನ್ನು ಲೂಟಿ ಮಾಡಿ ಹೈಕಮಾಂಡ್‌ಗೆ ಕಳುಹಿಸಿರುವ ಈ ಸರ್ಕಾರವು ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ತಕ್ಷಣವೇ ಕಳಂಕಿತ ಸಚಿವರ ರಾಜೀನಾಮೆ ಪಡೆಯಬೇಕು; ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದರು.
ಈ ವೇಳೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
