ಖಾನಾಪೂರ ತಾಲೂಕಿನ ಜಾಂಬೋಟಿ ಭಾಗದ ನೀಲಾವಡೆ ಗ್ರಾಮದಲ್ಲಿ ಅಂಬೇಡ್ಕರ್ ಬ್ರಿಗೇಡ್ ಹಾಗೂ ದಲಿತ ಸೇನೆ ಸಂಘಟನೆಗಳ ವತಿಯಿಂದ ಪ್ರಮುಖ ಜನಾಂಗೀಯ ಹಾಗೂ ಮೂಲಭೂತ ಸಮಸ್ಯೆಗಳ ಕುರಿತು ವಿಶೇಷ ಸಭೆ ನಡೆಯಿತು. ಮಾಜಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣ್ ಮಾದಾರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಸ್ಥಳೀಯ ಬಡಜನರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಲಾಯಿತು.
ಖಾನಾಪೂರ ತಾಲೂಕಿನ ಪಶ್ಚಿಮ ಅರಣ್ಯ ವ್ಯಾಪ್ತಿಯ ನೀಲಾವಡೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಎಸ್.ಸಿ, ಎಸ್.ಟಿ ಸೇರಿದಂತೆ ಹಲವು ಬಡ ಕುಟುಂಬಗಳು ಎದುರಿಸುತ್ತಿರುವ ನಿತ್ಯದ ಸಮಸ್ಯೆಗಳು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಣ್ ಮಾದಾರ ಅವರು, “ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ಶೋಷಿತರು ಅನುಭವಿಸುತ್ತಿರುವ ಕಷ್ಟಗಳನ್ನು ಅರಿತು ಅವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ಸಂಘಟನೆ ಬದ್ಧವಾಗಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಯೋಚನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಸಮಾಜದ ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ನಾವು ನಿರಂತರವಾಗಿ ಮಾಡುತ್ತೇವೆ” ಎಂದು ಭರವಸೆ ನೀಡಿದರು.

