ಕಾರ್ಮಿಕರ ಸುದೀರ್ಘ ಹೋರಾಟದ ಫಲವಾಗಿ ಸರ್ಕಾರ ಹೊರಡಿಸಿರುವ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC) ಸಮಿತಿ ವತಿಯಿಂದ ರಾಜ್ಯಮಟ್ಟದ ಅಹೋರಾತ್ರಿ ಪ್ರತಿಭಟನೆ ಹಾಗೂ ಧರಣಿಯನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಲ್ಲಿಕಾರ್ಜುನ ಎಚ್ ಟಿ ತಿಳಿಸಿದರು. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾರ್ಮಿಕರ ಹೋರಾಟದ ಫಲವಾಗಿ ಹೊರಡಿಸಲಾಗಿರುವ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ಜಾರಿಗೊಳಿಸದೆ, ಉದ್ಯಮಪತಿಗಳ ಒತ್ತಡಕ್ಕೆ ಮಣಿದು ಸರ್ಕಾರ ಪುನಃ ಪರಿಶೀಲನಾ ಸಮಿತಿ ರಚಿಸಿರುವ ಕ್ರಮ ಕಾರ್ಮಿಕ ವಿರೋಧಿಯಾಗಿದೆ ಎಂದು ಆರೋಪಿಸಿದರು. ಕಾರ್ಮಿಕರ ದೀರ್ಘಕಾಲದ ಹೋರಾಟದ ಬಳಿಕ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಾರ್ಮಿಕ ಪ್ರತಿನಿಧಿಗಳು, ಉದ್ಯಮಿಗಳ ಪ್ರತಿನಿಧಿಗಳು ಹಾಗೂ ಕಾರ್ಮಿಕ, ಆದಾಯ, ಕಂದಾಯ ಮತ್ತು ವಾಣಿಜ್ಯ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡ ಕನಿಷ್ಠ ವೇತನ ಸಲಹಾ ಮಂಡಳಿಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿತ್ತು. ಇದರ ಆಧಾರದ ಮೇಲೆ ಸರ್ಕಾರ 2025ರ ಏಪ್ರಿಲ್ 11ರಂದು ಪರಿಷ್ಕೃತ ಕನಿಷ್ಠ ವೇತನದ ಅಧಿಸೂಚನೆ ಹೊರಡಿಸಿತ್ತು. ಆದರೆ ಇದೀಗ ಆ ಅಧಿಸೂಚನೆಯನ್ನು ಜಾರಿಗೊಳಿಸುವ ಬದಲು ಮರುಪರಿಶೀಲನೆಗೆ ಮುಂದಾಗಿರುವುದು ಕಾರ್ಮಿಕರಿಗೆ ಅನ್ಯಾಯ ಮಾಡುವ ಕ್ರಮವಾಗಿದೆಎಂದು ಆಕ್ರೋಶ ವ್ಯಕ್ತಪಡಿಸಿದೆರು. ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 9ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಅಹೋರಾತ್ರಿ ಧರಣಿ ನಡೆಸಲಾಗುವುದು. ರಾಜ್ಯದಾದ್ಯಂತದ ಕಾರ್ಮಿಕರು, ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಕೂಡಲೇ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು. ಕಾರ್ಮಿಕ ವಿರೋಧಿ ಕ್ರಮಗಳನ್ನು ಕೈಬಿಟ್ಟು ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದುಸಂಘಟನೆ ಒತ್ತಾಯಿಸಿದರು.
