Belagavi

ಬೆಳಗಾವಿಯಲ್ಲಿ ಪೂರ್ಣಗೊಂಡ ಎಸ್ ಐ ಆರ್ ನ ಮೊದಲ ಹಂತದ ಪ್ರಕ್ರಿಯೆ ಮ್ಯಾಪಿಂಗ್ ನಲ್ಲಿ ಬರದ 36,476 ಜನ ; ಅವರಿಗೆ ಕಾರಣ ಕೇಳಿ ನೋಟಿಸ್; ಡಿಸಿ ಮೊಹ್ಮದ್ ರೋಷನ್

Share

ಬೆಳಗಾವಿಯಲ್ಲಿ ಎಸ್ಐಆರ್ ನ ಮೊದಲ ಹಂತದ ಪ್ರಕ್ರಿಯೆ ಪೂರ್ಣಗೊಂಡಿದೆ, ಜಿಲ್ಲೆಯಲ್ಲಿ 36,476 ಜನ ಮ್ಯಾಪಿಂಗ್ ನಲ್ಲಿ ಬಂದಿಲ್ಲ. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಸ್ಐಆರ್ ನಲ್ಲಿ ಹೆಸರು ಇಲ್ಲದಿದ್ದರೆ, ಸಂಬಂಧಿಸಿದವರು ಬಿಎಲ್ಓ ಕಡೆ ಸಂಪರ್ಕಿಸಬೇಕು ಎಂದರು.
ಜಿಲ್ಲೆಯಾದ್ಯಂತ ಕರಡು ಮತದಾರರ ಪಟ್ಟಿಯನ್ನು ಆ.24ರಂದು ಬಿಡುಗಡೆ ಮಾಡಲಾಗುತ್ತಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿ ಕಚೇರಿ ಹಾಗೂ ವಾರ್ಡ್‌ಗಳಲ್ಲಿರುವ ನೋಟಿಸ್ ಬೋರ್ಡ್‌ಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ವೆಬ್‌ಸೈಟ್‌ ಮೂಲಕವೂ ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದರು.

ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದರೆ ಆತಂಕಪಡುವ ಅಗತ್ಯವಿಲ್ಲ. ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಆ.24ರಿಂದ ಸೆ.29ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಫಾರ್ಮ್-6, ಎನ್‌ಆರ್‌ಐ ಮತದಾರರಿಗೆ ಫಾರ್ಮ್-6ಎ, ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ಫಾರ್ಮ್-7 ಹಾಗೂ ಮತದಾರರ ವಿವರಗಳಲ್ಲಿ ತಿದ್ದುಪಡಿ ಅಥವಾ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ವರ್ಗಾವಣೆಗೆ ಫಾರ್ಮ್-8 ಬಳಸಬಹುದಾಗಿದೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಟ್ಟು 41,07,000 ಮತದಾರರ ಪೈಕಿ 35,93,561 ಮತದಾರರ ಹೆಸರುಗಳನ್ನು ಉಳಿಸಿಕೊಳ್ಳಲಾಗಿದೆ. ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡಿರುವವರು ಸೇರಿದಂತೆ ವಿವಿಧ ಕಾರಣಗಳಿಂದ ಉಳಿದ ಹೆಸರುಗಳನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ 1,34,903 ಮೃತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಆ.24ರಿಂದ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ಆರಂಭವಾಗಲಿದ್ದು, ಸೆ.22ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಹೆಸರುಗಳ ಕುರಿತು ತಿದ್ದುಪಡಿ ಅಥವಾ ಆಕ್ಷೇಪಣೆ ಇದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಬೇಕು. ನಿಗದಿಪಡಿಸಿರುವ 11 ದಾಖಲೆಗಳ ಪೈಕಿ ವಯಸ್ಸಿನ ದಾಖಲೆ ಹಾಗೂ ಜನ್ಮಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆಗಾಗಿ ನೀಡಬೇಕಾಗುತ್ತದೆ. ದಾಖಲೆಗಳ ಪರಿಶೀಲನೆಯ ಬಳಿಕ ಅರ್ಹರನ್ನು ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು ಎಂದರು.
ಪ್ರತಿಯೊಬ್ಬರೂ ಕರಡು ಮತದಾರರ ಪಟ್ಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ತಮ್ಮ ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ ಕೂಡಲೇ ಫಾರ್ಮ್-6 ಸಲ್ಲಿಸುವ ಮೂಲಕ ಹೊಸದಾಗಿ ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಇದೇ ವೇಳೆ ಜಿಲ್ಲೆಯಲ್ಲಿ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದ್ದು, ಒಟ್ಟು 4,644 ಮತಗಟ್ಟೆಗಳನ್ನು ಮಾಡಲಾಗಿದೆ. ಈ ಪೈಕಿ 119 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

Tags:

error: Content is protected !!