ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ ವನ್ನೂರು ಗ್ರಾಮದಲ್ಲಿ ಚಚಡಿ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ರೈತರು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ, ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದ್ದು, ಅಂತಿಮವಾಗಿ ತಹಸೀಲ್ದಾರ್ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ ವನ್ನೂರು ಗ್ರಾಮದಲ್ಲಿ ಚಚಡಿ ಏತ ನೀರಾವರಿ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿ ನೂರಾರು ರೈತರು ಬೃಹತ್ ಹೋರಾಟ ನಡೆಸಿದರು. ವನ್ನೂರು ಗ್ರಾಮದ ರೈತ ಮುಖಂಡರ ನೇತೃತ್ವದಲ್ಲಿ ಹಾಗೂ ಕಿತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ ಮುಂದಾಳತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಮಳೆಯನ್ನೂ ಲೆಕ್ಕಿಸದೆ ರೈತರು ರಸ್ತೆಯ ಮೇಲೆ ಕುಳಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯೋಜನೆಯ ಕಾಮಗಾರಿಗಳ ವಿಳಂಬ ಹಾಗೂ ರೈತರ ಪ್ರಮುಖ ನಾಲ್ಕು ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬೈಲಹೊಂಗಲ ತಹಸೀಲ್ದಾರ್ ಸದಾಶಿವ ಮಕ್ಕೋಜಿ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ರೈತರಿಗೆ ಸಿಗಬೇಕಾದ ಪರಿಹಾರ ಹಾಗೂ ಕಾಲುವೆ ಮೂಲಕ ಸಮರ್ಪಕವಾಗಿ ನೀರು ಪೂರೈಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರತಿ ತಿಂಗಳು ಅಧಿಕಾರಿಗಳು ಹಾಗೂ ರೈತರ ಸಭೆ ನಡೆಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ರೈತರು ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾಂತೇಶ ದೊಡ್ಡಗೌಡರು, ತಮ್ಮ ಸರ್ಕಾರದ ಅವಧಿಯಲ್ಲಿ ಶೇಕಡಾ 80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಈಗಿನ ಸರ್ಕಾರವು ಅಗತ್ಯ ಅನುದಾನ ಬಿಡುಗಡೆ ಮಾಡಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

