ಶಾಲಾ, ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಚಂದನ ಹೊಸೂರ ಗ್ರಾಮದಲ್ಲಿ ನಡೆದಿದೆ.

ಪ್ರತಿದಿನ ಬಸ್‌ಗಳ ಅನಾನುಕೂಲದಿಂದಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದ್ದು, ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಬಸ್ ತಡೆದು ರಸ್ತೆ ಬಂದ್ ಮಾಡಿ ಸಾರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ವಿದ್ಯಾರ್ಥಿಗಳು, ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು.
ವಿಷಯ ತಿಳಿದು ಸಾರಿಗೆ ಅಧಿಕಾರಿಗಳು ಹಾಗೂ ಹಿರೇಬಾಗೇವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಾರಿಗೆ ಅಧಿಕಾರಿಗಳು, ಅಗತ್ಯಕ್ಕೆ ತಕ್ಕಂತೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
