ಬರಗಾಲ ಘೋಷಣೆ ಸೇರಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ರೈತರು ಪ್ರತಿಭಟನೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಭಾರತೀಯ ಕೃಷಿಕ ಸಮಾಜ ಹಾಗೂ ರಾಷ್ಟ್ರೀಯ ರೈತ ಸಂಘಟನೆಗಳ ನೇತೃತ್ವದಲ್ಲಿ ಧಾರವಾಡದ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಡೊಳ್ಳು, ಹಲಿಗೆ ಬಾರಿಸುತ್ತಾ ಪ್ರತಿಭಟನೆ ನಡೆಸಿದ ರೈತರು, ಕೃಷಿ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದರು. ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮಳೆಯಾಗದೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪನ್ನಗಳಿಗೆ ನಿರೀಕ್ಷಿತ ಬೆಲೆ ದೊರೆಯದೆ ರೈತರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಈ ಕೂಡಲೇ ರಾಜ್ಯದಲ್ಲಿ ಬರಗಾಲ ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಹಾಗೂ ಬೆಳೆ ನಷ್ಟ ಪರಿಹಾರ ನೀಡಬೇಕು. ರೈತರ ಮೇಲಿರುವ ಬ್ಯಾಂಕ್ ಹಾಗೂ ವಿವಿಧ ಸಂಸ್ಥೆಗಳ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ನಿರ್ಲಕ್ಷ್ಯ ಧೋರಣೆ ತೋರಿದ್ದಲ್ಲಿ ಬರುವ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.
