ಬೆಳಗಾವಿ ನಗರ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ನಗರದ ಸೌಂದರ್ಯೀಕರಣ ಹಾಗೂ ಸಂಚಾರ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ವ್ಯಾಪ್ತಿಯಲ್ಲಿ ಸ್ಮಾರ್ಟ್ ವೃತ್ತಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ನಗರ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ನಗರದ ಪ್ರಮುಖ ವೃತ್ತಗಳನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಹೀಗಾಗಿ ನಗರದ ವಿವಿಧ ಭಾಗಗಳಲ್ಲಿ ಸ್ಮಾರ್ಟ್ ವೃತ್ತಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ವೃತ್ತಗಳ ನಿರ್ಮಾಣದ ಸಂದರ್ಭದಲ್ಲಿ ಸಂಚಾರ ದಟ್ಟಣೆ, ಸಾರ್ವಜನಿಕರ ಅನುಕೂಲ ಹಾಗೂ ನಗರದ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಳಗಾವಿಯಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಯೋಜನೆಗೆ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬುಡಾ ಅಧಿಕಾರಿಗಳು ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಸ್ಥಳೀಯವಾಗಿ ಉದ್ಯೋಗಾವಕಾಶಗಳ ಕೊರತೆಯಿಂದ ಬೆಳಗಾವಿಯ ಯುವಕರು ಉದ್ಯೋಗ ಅರಸಿ ಬೇರೆ ಜಿಲ್ಲೆಗಳು ಹಾಗೂ ರಾಜ್ಯಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿಯೇ ಐಟಿ ಹಾಗೂ ಸಂಬಂಧಿತ ಕ್ಷೇತ್ರಗಳ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಐಟಿ ಪಾರ್ಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಯೋಜನೆಗೆ ಅಗತ್ಯವಿರುವ ಭೂಮಿ, ಮೂಲಸೌಕರ್ಯ ಸೇರಿದಂತೆ ವಿವಿಧ ಅಂಶಗಳ ಕುರಿತು ಸಮಗ್ರ ರೂಪುರೇಷೆ ಸಿದ್ಧಪಡಿಸಿ ಮುಂದಿನ ಹಂತದ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಸೂಚಿಸಿದರು.
ನಗರದ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು. ರಸ್ತೆ, ವೃತ್ತ, ಉದ್ಯಾನಗಳು ಹಾಗೂ ಇತರ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಬೆಳಗಾವಿಯನ್ನು ಮತ್ತಷ್ಟು ಸುಂದರ ಹಾಗೂ ವ್ಯವಸ್ಥಿತ ನಗರವನ್ನಾಗಿ ರೂಪಿಸಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ದಕ್ಷಿಣ ಶಾಸಕ ಅಭಯ್ ಪಾಟೀಲ್,ಉಪಮೇಯರ್ ಹನುಮಂತ ಕೊಂಗಾಲಿ, ಬುಡಾ ಅಧ್ಯಕ್ಷ ಹಾಗೂ ಶಾಸಕ ಆಸೀಫ್ ಸೇಠ್, ಸಮೀವುಲ್ಲಾ ಮಾಡಿವಾಲೆ, ಪುಷ್ಪಾ ಪರ್ವತರಾವ್, ಬುಡಾ ಆಯುಕ್ತ ಶಕೀಲ್ ಅಹ್ಮದ್ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
