ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಹೋರಾಟ ನಡೆಸಿದ್ದಾರೆ. ಫ್ರೀಡಂ ಪಾರ್‌್ಸನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ದಿಗ್ಗಜರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಾಖಂಡದಲ್ಲಿ ದುರುದ್ದೇಶಪೂರಿತವಾಗಿ ಎಫ್‌ಐಆರ್ ದಾಖಲಿಸಿರುವುದನ್ನು ತೀವ್ರವಾಗಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ದ್ವೇಷ ರಾಜಕಾರಣದ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಸೇರಿದಂತೆ ರಾಜ್ಯದ ಅನೇಕ ಸಚಿವರು, ಶಾಸಕರು ಹಾಗೂ ಮುಖಂಡರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದು ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
