ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಳಗಾವಿ ಜಿಲ್ಲಾದ್ಯಂತ ಇಂದು ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಗುರುಗಳಿಗೆ ನಮನ ಸಲ್ಲಿಸುವ ಈ ಸಮಾಜಮುಖಿ ಕಾರ್ಯದಲ್ಲಿ ಸಾರ್ವಜನಿಕರು ಹಾಗೂ ನೌಕರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.


ಶಿಕ್ಷಕರ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರದ ನೌಕರರ ಸಂಘ, ಶಿಕ್ಷಕರ ಸಂಘ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಕ್ಷಕರ ದಿನಾಚರಣೆಯ ಪೂರ್ವಭಾವಿಯಾಗಿ ಕರ್ನಾಟಕ ಸರ್ಕಾರದ ನೌಕರರ ಸಂಘ, ಶಿಕ್ಷಕರ ಸಂಘ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತರಾದ ಕೆ.ಎಂ. ಜಾನಕಿ ತಿಳಿಸಿದ್ದಾರೆ. ಈ ಬಾರಿ ಒಟ್ಟು 10,000 ಯುನಿಟ್ ರಕ್ತ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ರಕ್ತದಾನದ ಕುರಿತು ಸಮಾಜದಲ್ಲಿರುವ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಲು ಇದೊಂದು ಉತ್ತಮ ಸಂದರ್ಭವಾಗಿದ್ದು, ಶಿಷ್ಯರು, ಗುರುಗಳು, ಎಲ್ಲ ಇಲಾಖೆಯ ನೌಕರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವವನ್ನು ಸಾರಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಒಟ್ಟು 23 ಕೇಂದ್ರಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (CEO) ರಾಹುಲ್ ಶಿಂಧೆ ತಿಳಿಸಿದ್ದಾರೆ. ಗುರು ಶಿಕ್ಷಕರಿಗೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯವಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಇದುವರೆಗೆ 10,000 ಕ್ಕೂ ಹೆಚ್ಚು ನೋಂದಣಿಗಳು ಆಗಿವೆ. ತಾಲೂಕು ಮಟ್ಟದ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಗುರುತಿಸಲಾದ 23 ಕೇಂದ್ರಗಳಲ್ಲಿ ವೈದ್ಯಕೀಯ ತಂಡದ ನೆರವಿನೊಂದಿಗೆ ರಕ್ತದಾನ ಮತ್ತು ಸ್ಥಳದಲ್ಲೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು, ಸರಕಾರಿ ನೌಕರರು, ಸಂಘ-ಸಂಸ್ಥೆಗಳು ಹಾಗೂ ಮಾಧ್ಯಮ ಮಿತ್ರರು ಸ್ವಯಂಪ್ರೇರಣೆಯಿಂದ ಈ ಬೃಹತ್ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಕೆ.ಎಸ್.ಪಿ.ಎಸ್. ಕಡೋಲಿ ಶಾಲೆಯ ಶಿಕ್ಷಕಿ ಮಹಾದೇವಿ. ಭಟ್ಟಿನವರ್ ಮೊದಲ ಬಾರಿಗೆ ರಕ್ತದಾನ ಮಾಡುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ರಕ್ತದಾನವೇ ಮಹಾದಾನ ಹಾಗೂ ಇದು ಜೀವಗಳನ್ನು ಉಳಿಸುವ ಪುಣ್ಯ ಕಾರ್ಯವೆಂದು ಅಭಿಪ್ರಾಯಪಟ್ಟರು.
ಈ ವೇಳೆ ಶಿಕ್ಷಕರು, ನೌಕರರು, ಇನ್ನುಳಿದವರು ಭಾಗಿಯಾಗಿ ರಕ್ತದಾನ ಮಾಡಿದರು.
