ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಬೇಕಾದ ಬಿಜೆಪಿ ನಾಯಕರು ಕೇವಲ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವೆ ಹಾಗೂ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಜಾಬ್’ಲೇಸ್ ಆಗಿದ್ದು ಬೇರೆ ಕೆಲಸವಿಲ್ಲದೆ ಪಾದಯಾತ್ರೆ ಮಾಡುತ್ತಿದ್ದು, ರಾಜ್ಯದ ಜನ ಅವರನ್ನ ಕ್ಷಮಿಸಲ್ಲ ಎಂದಿದ್ದಾರೆ.


ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನತಾದರ್ಶನ ಹಮ್ಮಿಕೊಂಡಿದ್ದ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ವೇಳೆ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾದ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಆದರೆ ದುರ್ದೈವ ಬಿಜೆಪಿ ಅವರಿಗೆ ಚರ್ಚೆ ಬಿಟ್ಟು ರಾಜಕಾರಣ ಮಾಡುವುದು ಮುಖ್ಯವಾಗಿದೆ ಎಂದು ಕಿಡಿಕಾರಿದರು.

ರಾಜೀನಾಮೆ ಕೊಟ್ಟ ಮೇಲೂ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರೆ, ಇದರ ಅರ್ಥ ಬಿಜೆಪಿ ಅವರಿಗೆ ಮಾಡಲು ಬೇರೆ ಕೆಲಸವಿಲ್ಲ, ಕರ್ನಾಟಕ ರಾಜ್ಯಕ್ಕೆ ನಿರುದ್ಯೋಗಿಗಳಾಗಿದ್ದಾರೆ. ಹಾಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇನ್ನು ವಿಶೇಷ ಅಧಿವೇಶನ ಕರೆಯುವ ವಿಚಾರವಾಗಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿಯ ಚಿಂತನೆ ಮಾಡಲು ನಾವು ಕರೆಯುತ್ತಿದ್ದೇವೆ. ಆದರೆ ಮತ್ತೆ ಇದೇ ರೀತಿ ಅವರು ಅದರಲ್ಲಿ ರಾಜಕಾರಣ ಮಾಡಿದರೆ ರಾಜ್ಯದ ಜನ ಅವರನ್ನು ಕ್ಷಮಿಸುವುದಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.

