ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ತಹಸೀಲ್ದಾರ್ ರವೀಂದ್ರ ಹಾದಿಮನಿ ಹಾಗೂ ತಾಲೂಕು ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶನಿವಾರ ಮಂಗಸೂಳಿ ಗ್ರಾಮದ ತುಕಾರಾಂ ಮಂದಿರ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರಂಭದಲ್ಲಿ ಸಸಿಗೆ ನೀರುಣಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಅವರು ಪ್ರಜಾ ಸೇವಾ ಯೋಜನೆಯ ಕುರಿತು ಮಾಹಿತಿ ನೀಡಿ, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೆ ಅಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳದಲ್ಲಿಯೇ ಇತ್ಯರ್ಥಪಡಿಸಬಹುದಾದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಾಗುವುದು ಎಂದು ಹೇಳಿದರು.
ತಹಸೀಲ್ದಾರ್ ರವೀಂದ್ರ ಹಾದಿಮನಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ಇದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಪ್ರತಿಯೊಬ್ಬ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಪೂಜಾರಿ ಮಾತನಾಡಿ, ಸಾಮಾನ್ಯ ಜನರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಈ ಆಂದೋಲನ ರೂಪಿಸಲಾಗಿದೆ ಎಂದರು. ಅಲ್ಲದೆ, ಕಂದಾಯ, ಭೂಮಾಪನ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿಕೊಂಡರು.
ಅಥಣಿ ಹಾಗೂ ಕಾಗವಾಡ ತಾಲೂಕಿನ ಭೂಮಾಪನ ಇಲಾಖೆಯ ವ್ಯವಸ್ಥಾಪಕ ಎಸ್.ಎಸ್. ಶೇಖ್ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕನ್ನು ಭೂಮಾಪನ ಇಲಾಖೆಯ ಪೈಲಟ್ ಪ್ರಾಜೆಕ್ಟ್ ಆಗಿ ಆಯ್ಕೆ ಮಾಡಲಾಗಿದೆ. ಮಂಗಸೂಳಿ ಗ್ರಾಮವನ್ನು ಪೈಲಟ್ ಪ್ರಾಜೆಕ್ಟ್ ಆಗಿ ಆಯ್ಕೆ ಮಾಡಲಾಗಿದ್ದು, ಸ್ವಾಮಿತ್ವ ಯೋಜನೆಯಡಿ ಡ್ರೋನ್ ಮೂಲಕ ಸರ್ವೆ ನಡೆಸಿ ಗ್ರಾಮದ ಮನೆಗಳ ಚೆಕ್ಬಂದಿ ನಡೆಸಿ ಆಸ್ತಿ ಉತಾರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ರಶ್ಮಿ ಜಕಾತಿ, ಎಂ.ಎನ್. ಕಾಬಳೆ, ಸಿಡಿಪಿಒ ಸಂಜುಕುಮಾರ ಸದಲಗೆ, ಹಸೇನ್ಕಾಂ ಇಲಾಖೆಯ ಮುಖ್ಯ ಅಧಿಕಾರಿ ಎಂ.ಎನ್. ಮಖಾನಿ, ಪಿಎಸ್ಐ ರಾಘವೇಂದ್ರ ಖೂತ್, ಕೃಷಿ ಇಲಾಖೆ ಅಧಿಕಾರಿ ಕಾಂತಿನಾಥ್ ಬಿರಾದಾರ್, ಬಿಇಒ ಚೆನ್ನಿಂಗ ರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮ ಪಂಚಾಯಿತಿಯ ಪಿಡಿಒ ಸಂಜಯ್ ಸೂರ್ಯವಂಶಿ ಅವರು ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಮಾಡಿದರು.
