ಧಾರವಾಡ: ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಜಿಲ್ಲಾ ಹಾಗೂ ಗ್ರಾಮೀಣ ಘಟಕಕ್ಕೆ ನೂತನ ಅಧ್ಯಕ್ಷರ ಆಯ್ಕೆ ಮಾಡಿ ಆದೇಶ ಮಾಡಲಾಗಿದೆ.

ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಂದಗೋಳದ ಚಂದ್ರಶೇಖರ ಜುಟ್ಟಲ್ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸದಾನಂದ ಡಂಗನವರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಡೆದ ಸಂಘಟನಾ ಸೃಜನ್ ಅಭಿಯಾನ’ದಡಿ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಪ್ರಮುಖ ಮುಖಂಡರವರೆಗೆ ಅಭಿಪ್ರಾಯಗಳನ್ನು ಆಲಿಸಿ, ವಿವಿಧ ಹಂತಗಳಲ್ಲಿ ಚರ್ಚೆ ನಡೆಸಿದ ಬಳಿಕ ಈ ನೇಮಕಾತಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರುಗಳು ಕೇಳಿಬಂದಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಚಂದ್ರಶೇಖರ ಜುಟ್ಟಲ್ ಅವರ ಹೆಸರನ್ನು ಸೂಚಿಸಿದ್ದರು ಎನ್ನಲಾಗಿದೆ. ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಅವರನ್ನು ನೇಮಕ ಮಾಡಲಾಗಿದೆ. ಈ ಸ್ಥಾನಕ್ಕೆ 20ಕ್ಕೂ ಹೆಚ್ಚು ಮಂದಿ ಪೈಪೋಟಿಯಲ್ಲಿದ್ದರು ಎನ್ನಲಾಗಿದ್ದು, ಅಂತಿಮವಾಗಿ ಡಂಗನವರ ಅವರ ಹೆಸರಿಗೆ ಕಾಂಗ್ರೆಸ್ ಹೈಕಮಾಂಡ್ ಮುದ್ರೆ ಒತ್ತಿದೆ.
ಹೊಸ ಅಧ್ಯಕ್ಷರ ನೇಮಕದೊಂದಿಗೆ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಮುಂಬರುವ ದಿನಗಳಲ್ಲಿ ಬೂತ್ ಮಟ್ಟದಿಂದ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ನೂತನ ಅಧ್ಯಕ್ಷರ ಮುಂದಿರುವ ಪ್ರಮುಖ ಸವಾಲಾಗಿದೆ.
