ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಜಾರಿ ನಿರ್ದೇಶನಾಲಯ (ED) ದಾಳಿ ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಕೇಂದ್ರ ಸರ್ಕಾರದ ಈ ತನಿಖಾ ರಾಜಕಾರಣವನ್ನು ಖಂಡಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ದಕ್ಷಿಣ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಸಂಚಲನ ಮೂಡಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ (ED) ದಾಳಿಯನ್ನು ಖಂಡಿಸಿ ಬೆಳಗಾವಿಯ ಐತಿಹಾಸಿಕ ರಾಣಿ ಚೆನ್ನಮ್ಮ ವೃತ್ತದಲ್ಲಿ ದಕ್ಷಿಣ ಕಾಂಗ್ರೆಸ್ ಘಟಕದ ವತಿಯಿಂದ ಭರ್ಜರಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಈ ಕ್ರಮವು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಪ್ರಭಾವಿ ನಾಯಕರನ್ನು ಹತ್ತಿಕ್ಕುವ ಯತ್ನ ಎಂದು ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕಿ ಆಯೇಷಾ ಸನಾದಿ, ಸತೀಶ್ ಜಾರಕಿಹೊಳಿ ಅವರು ರಾಜಕೀಯವಾಗಿ ಬೆಳೆಯುತ್ತಿರುವುದನ್ನು ಸಹಿಸದ ಬಿಜೆಪಿ, ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕೇವಲ ವಿರೋಧ ಪಕ್ಷದ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದ್ದು, ಇದಕ್ಕೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಾಮನಿರ್ದೇಶಿತ ಸದಸ್ಯ ರಮೇಶ್ ಸೊಂಟಕ್ಕಿ ಮಾತನಾಡಿ, ಈ ದಾಳಿಯು ಸಂಪೂರ್ಣವಾಗಿ ಪೂರ್ವಗ್ರಹ ಪೀಡಿತವಾಗಿದ್ದು, ದಲಿತ ಮತ್ತು ಅಹಿಂಸಾ ನಾಯಕರ ಧಮನ ಮಾಡುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಬುದ್ಧ, ಬಸವ, ಅಂಬೇಡ್ಕರ್ ತತ್ವಗಳನ್ನು ಮೈಗೂಡಿಸಿಕೊಂಡಿರುವ ನಾಯಕರನ್ನು ಹೆದರಿಸಿ ತಮ್ಮ ಸಿದ್ಧಾಂತಕ್ಕೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕಿಡಿಕಾರಿದರು. ಮುಂದಿನ ದಿನಗಳಲ್ಲಿ ಸಮಾನ ಮನಸ್ಕರೊಂದಿಗೆ ಚರ್ಚಿಸಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ರೂಪಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
