ಬೆಳಗಾವಿಯಲ್ಲಿ ಗಣೇಶೋತ್ಸವದ ಸಡಗರ ಮನೆ ಮಾಡಿದ್ದು, ಹಬ್ಬದ ಪೂರ್ವಭಾವಿ ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ನಗರದಲ್ಲಿ ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರಾತ್ರಿ ವೇಳೆ ಖುದ್ದು ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ನಗರದಲ್ಲಿ ಗಣೇಶೋತ್ಸವದ ಸುವ್ಯವಸ್ಥಿತ ಆಚರಣೆ ಹಿನ್ನೆಲೆಯಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ರಾತ್ರಿ ವೇಳೆ ರಸ್ತೆ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಹುತಾತ್ಮ ಚೌಕ್, ರಾಮದೇವ ಗಲ್ಲಿ ಮತ್ತು ಸಮಾದೇವಿ ಗಲ್ಲಿ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡುವ ಕಾರ್ಯ ಭರದಿಂದ ಸಾಗಿದ್ದು, ಹಬ್ಬದ ಮುಂಚಿತವಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಎಂದು ಶಾಸಕರು ತಿಳಿಸಿದರು.
ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಹಬ್ಬದ ಸಿದ್ಧತೆಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಹಗಲಿರುಳು ಶ್ರಮಿಸುತ್ತಿರುವ ಸಿಬ್ಬಂದಿ ಹಾಗೂ ಕಾರ್ಮಿಕರ ಕಾರ್ಯವನ್ನು ಶಾಸಕರು ಮತ್ತು ಆಯುಕ್ತರು ಶ್ಲಾಘಿಸಿದ್ದಾರೆ. ಯಾವುದೇ ಅಡಚಣೆಯಿಲ್ಲದೆ ವಿಜ್ರಂಭಣೆಯಿಂದ ಗಣೇಶೋತ್ಸವ ಆಚರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದ್ದು, ರಾತ್ರಿ ಆರಂಭವಾದ ಕಾಮಗಾರಿಗಳು ನಿರಂತರವಾಗಿ ಮುಂದುವರಿದಿವೆ.
