ಬೆಳಗಾವಿ ಜಿಲ್ಲೆಯಲ್ಲಿ ರೈತರ ತಾಳ್ಮೆಯ ಕಟ್ಟೆ ಒಡೆದಿದೆ. ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆಗೆ ಬೇಸತ್ತ ಅನ್ನದಾತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಅನಿಯಮಿತ ಲೋಡ್ ಶೆಡ್ಡಿಂಗ್ ಖಂಡಿಸಿ ನೂರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಬೇಕಾದ ಈ ಮಹತ್ವದ ಹಂಗಾಮಿನಲ್ಲಿ, ನಿಗದಿತ ಎಂಟು ಗಂಟೆಗಳ ಬದಲಿಗೆ ಕೇವಲ ಎರಡು ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿರುವುದು ಅನ್ನದಾತರ ಕೆಂಗಣ್ಣಿಗೆ ಗುರಿಯಾಗಿದೆ. ಸುತ್ತಮುತ್ತಲಿನ ಇlರೆ ಗ್ರಾಮಗಳಲ್ಲಿ ಐದರಿಂದ ಆರು ಗಂಟೆಗಳ ಕಾಲ ವಿದ್ಯುತ್ ನೀಡಲಾಗುತ್ತಿದ್ದರೆ, ತಮ್ಮ ಗ್ರಾಮಕ್ಕೆ ಮಾತ್ರ ಅನ್ಯಾಯ ಎಸಗಲಾಗುತ್ತಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಗಲು-ರಾತ್ರಿ ಎನ್ನದೆ ಕಷ್ಟಪಟ್ಟು ಬೆಳೆಯುತ್ತಿರುವ ಬೆಳೆಗಳಿಗೆ ಸಮರ್ಪಕವಾಗಿ ನೀರು ಹಾಯಿಸಲು ಸಾಧ್ಯವಾಗದೆ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ಬೆಳೆ ಒಣಗಿ ಹೋಗುವ ಆತಂಕ ಎದುರಾಗಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕೂಡಲೇ ಎಂಟು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಮನವಿಯನ್ನು ಸ್ವೀಕರಿಸಿದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ರೈತರು, ಕೂಡಲೇ ವಿದ್ಯುತ್ ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
