ಚಿಕ್ಕೋಡಿ ಬಿ.ಕೆ. ಕಾಲೇಜಿನ ಸಮೀಪ ನಿನ್ನೆ ರಾತ್ರಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ನಡೆದಿದೆ.

ಬಸವರಾಜ ಬರಮು ಲಂಬುಗೋಳ ಗಾಯಗೊಂಡ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಜಖಂಗೊಂಡಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಸ್ಥಳೀಯರ ನೆರವಿನಿಂದ ಗಾಯಾಳುವನ್ನು ತಕ್ಷಣವೇ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಗಾಯಾಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
