ಮಳೆಯಿಲ್ಲದೆ ಕಂಗೆಟ್ಟಿರುವ ಅನ್ನದಾತ ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾನೆ. ತೀವ್ರ ಬರ ಪರಿಸ್ಥಿತಿ ಎದುರಾಗಿದ್ದರೂ ರಾಜ್ಯ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕೂಡಲೇ ಬರ ಘೋಷಣೆ ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಗಿದೆ.
ಇಂದು ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ತೀವ್ರ ಮಳೆಗಾಲದ ಕೊರತೆ ಹಾಗೂ ರೈತರ ವಿವಿಧ ಸಮಸ್ಯೆಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ಸಿದ್ಧಗೌಡ ಮೋದಗಿ, 2026-27 ನೇ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಸಿ ರಾಜ್ಯದಲ್ಲಿ ಬರಗಾಲ ಘೋಷಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ, ರಾಷ್ಟ್ರೀಯ ಮತ್ತು ರಾಜ್ಯ ಪ್ರಕೃತಿ ವಿಕೋಪ ಯೋಜನೆಯಡಿ ಪ್ರತಿ ಎಕರೆಗೆ ರೂ. 25,000 ಪರಿಹಾರವನ್ನು ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಿದರು. ಬರಗಾಲದ ಜಂಟಿ ಸರ್ವೇಯನ್ನು ಕೂಡಲೇ ಕೈಗೊಳ್ಳಬೇಕು ಹಾಗೂ ಅತಿವೃಷ್ಟಿ ಹಾಗೂ ಲೋಡ್ ಶೆಡ್ಡಿಂಗ್ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆಗಳ ಕಾಲ ಮೂರು ಫೇಸ್ ನಿರಂತರ ವಿದ್ಯುತ್ ನೀಡಬೇಕು ಎಂದು ಅವರು ಆಗ್ರಹಿಸಿದರು.
ಇದರೊಂದಿಗೆ ಎಫ್‌ಆರ್‌ಪಿ ಮತ್ತು ಎಸ್‌ಐಪಿ ಅಡಿಯಲ್ಲಿ ಕಬ್ಬಿನ ದರವನ್ನು ನಿಗದಿಪಡಿಸಬೇಕು ಹಾಗೂ 2025-26 ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಹಣವನ್ನು ಕೊಡಿಸಬೇಕು ಎಂದು ಕೃಷಿಕ ಸಮಾಜ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
