ಮಳೆಯಿಲ್ಲದೆ ಕಂಗೆಟ್ಟಿರುವ ಖಾನಾಪುರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟದಲ್ಲಿದ್ದು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಲಾಗಿದೆ.

ಖಾನಾಪುರ ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಭತ್ತ ಸೇರಿದಂತೆ ಪ್ರಮುಖ ಬೆಳೆಗಳು ಒಣಗಿ ಹೋಗಿದ್ದು, ತೀವ್ರ ನಷ್ಟ ಎದುರಾಗಿರುವುದರಿಂದ ಸರ್ಕಾರ ಕೂಡಲೇ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಭರಮಾಣಿ ಪಾಟೀಲ್ ಸೋಮವಾರ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರಿಗೆ ಮನವಿ ಸಲ್ಲಿಸಿದರು. ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವುದು, ಸಾಲ ಮನ್ನಾ ಮಾಡುವುದು ಹಾಗೂ ಕೃಷಿ ಕಾರ್ಮಿಕರಿಗೆ 35 ಸಾವಿರ ರೂ. ನೆರೆನೀಡುವಂತೆ ಒತ್ತಾಯಿಸಿರುವ ಅವರು, ಬೇಡಿಕೆ ಈಡೇರದಿದ್ದರೆ ತಹಶೀಲ್ದಾರ್ ಕಚೇರಿ ಮುಂದೆ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ.
