Dharwad

ಧಾರವಾಡ ತಹಶೀಲ್ದಾರ್ ಭ್ರಷ್ಟಾಚಾರ: ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ವಿರುದ್ಧ ಬಿಜೆಪಿ ಪ್ರತಿಭಟನೆ

Share

ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಅವರು ಡೆವಲಪರ್ ಒಬ್ಬರಿಂದ 1 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, 50 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದೆ.

ಈ ಭ್ರಷ್ಟಾಚಾರವನ್ನು ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಮಾಜಿ ಶಾಸಕ ಅಮೃತ ದೇಸಾಯಿ ಮತ್ತು ಸೀಮಾ ಮಸೂತಿ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಅಲ್ಲದೆ, ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಮುತ್ತಿಗೆ ಪ್ರಯತ್ನವನ್ನು ವಿಫಲಗೊಳಿಸಿದರು. ರಾಜ್ಯದಲ್ಲಿ ಒಂದು ಕಡೆ ಸರ್ಕಾರಿ ಕೆಲಸಗಳಿಗೆ ಸಾರ್ವಜನಿಕರು ಹೆಚ್ಚುವರಿ ಹಣ ನೀಡಬಾರದು ಎಂದು ಹೇಳಲಾಗುತ್ತಿದ್ದರೆ, ಮತ್ತೊಂದೆಡೆ ತಹಶೀಲ್ದಾರ್ ಮಟ್ಟದ ಅಧಿಕಾರಿಯೇ ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಈ ಪ್ರಕರಣದ ಕುರಿತು ಸಂಪೂರ್ಣ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.

Tags:

error: Content is protected !!