ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸದಿ ರುವುದನ್ನು ಖಂಡಿಸಿ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಿಧಾನಸಭೆ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸಿರುವ ಶಾಸಕ ಯಶವಂತರಾಯಗೌಡ ಪಾಟೀಲ, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇಂಡಿ ಹಾಗೂ ಚಡಚಣ ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ, ಎರಡೂ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸದಿರುವುದು ಸ್ಥಳೀಯ ರೈತರು ಹಾಗೂ ಜನರಿಗೆ ಅನ್ಯಾಯವಾಗಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಮನವೊಲಿಸಲು ಮುಖ್ಯಮಂತ್ರಿ ಕಾರ್ಯಾಲಯದಿಂದ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೂ ಮೊದಲು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಆಗಸ್ಟ್ನಲ್ಲಿ ಯಶವಂತರಾಯಗೌಡ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವೊಲಿಕೆಯ ಹಿನ್ನೆಲೆಯಲ್ಲಿ ರಾಜೀನಾಮೆ ವಾಪಸ್ ಪಡೆದಿದ್ದರು.

ಇದೀಗ ಮತ್ತೊಮ್ಮೆ ಬರಗಾಲದ ವಿಚಾರವನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡಿರುವುದು ವಿಜಯಪುರ ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
