ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದ ಜೋಡೆತ್ತಿನ ರೈತರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಸುಮಾರು 40 ಜೋಡೆತ್ತಿನ ಬಂಡಿಗಳೊಂದಿಗೆ ಬಸವೇಶ್ವರ ವೃತ್ತದ ಮೂಲಕ ಮೆರವಣಿಗೆ ಯಲ್ಲಿ ಆಗಮಿಸಿದ ರೈತರು, ಬಳಿಕ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಗ್ರೇಡ್–2 ತಹಶೀಲ್ದಾರ್ ಸೋಮಲಿಂಗ ಅರಿಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಜೋಡೆತ್ತಿನ ರೈತರಿಗೆ ಸರ್ಕಾರದಿಂದ ಪ್ರೋತ್ಸಾಹಧನ ನೀಡಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ ಹಾರಿವಾಳ, ಜೋಡೆತ್ತಿನ ರೈತರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.


ಪ್ರತಿಭಟನೆಯಲ್ಲಿ ಬಸವರಾಜ ಮನಗೂಳಿ, ಅವಣ್ಣ ಹಿರೇಕುರುಬರ, ಸಂತೋಷ್ ಕುಮುಸಿ, ಬಸವರಾಜ ಗಚ್ಚಿನವರ, ಶರಣಪ್ಪ ಬೆಂಕಿ, ಅನಿಲ್ ಪವಾರ್ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು.
