State

ಎಫ್.ಐ.ಆರ್’ಗಳು ನಿಲ್ಲದಿದ್ದರೇ ರಾಜ್ಯವ್ಯಾಪಿ ಹೋರಾಟ

Share

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಎಸ್​ಐಆರ್ ವೇಳೆ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿರುವ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪೊಲೀಸರ ಮೇಲೆ ಒತ್ತಡ ಹೇರಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಮೆಚ್ಚಿಸಲು ಪೊಲೀಸರು ಎಫ್​ಐಆರ್ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.ಬಿಜೆಪಿ ನಾಯಕರು ಈಗಾಗಲೇ ಡಿಜಿ&ಐಜಿಪಿ ಸಲೀಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಕಾರ್ಯಕರ್ತರ ವಿರುದ್ಧ FIR ದಾಖಲಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಸುಳ್ಳು ಆರೋಪಗಳ ಮೂಲಕ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

‘FIR ಇಲ್ಲಿಗೇ ನಿಲ್ಲಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ’ ಎಂದು ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜ್ಯವ್ಯಾಪಿ ಹೋರಾಟ ನಡೆಸುವ ಬಗ್ಗೆ ಡಿಜಿಪಿಗೆ ತಿಳಿಸಿದ್ದೇವೆ. ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಫಾರ್ಮ್-7 ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ನೀಡಿರುವ ಫಾರ್ಮ್-7 ಸರಿಯಾಗಿದ್ದರೆ ಒಪ್ಪಿಕೊಳ್ಳಬೇಕು. ಸರಿಯಿಲ್ಲದಿದ್ದರೆ ತಿರಸ್ಕರಿಸಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಡಿಜಿ&ಐಜಿಪಿ ಸಲೀಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

Tags:

error: Content is protected !!