ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ, ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಧನದ ಸುದ್ದಿ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಧಾರವಾಡ ನಗರದ ಜುಬಿಲಿ ವೃತ್ತದಲ್ಲಿ ಹಾಗೂ ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಕೂಡ ಪ್ರತಿಭಟನೆ ನಡೆಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದರು. ಆದರೆ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿ ರಾಹುಲ್ ಗಾಂಧಿ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿ ಬಿಗಡಾಯಿಸದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು, ನಂತರ ಕೆಲಕಾಲ ಬಿಟ್ಟು ಬಿಡುಗಡೆಗೊಳಿಸಿದ್ದಾರೆ.

