State

ಅಂಗವೀಕಲರಿಗೆ ಆರ್ಥಿಕ ಸಹಾಯ ನೀಡಲು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ

Share

ರಾಮನಗರದಲ್ಲಿ ಅಂಗವಿಕಲರು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ಪಾದಯಾತ್ರೆ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆಲೆಗಳು ಮತ್ತು ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಧೋರಣೆಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.

ರಾಮನಗರದಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಹಣವಿಲ್ಲದ ಕಾರಣ ಸರ್ಕಾರವು ಅಂಗವಿಕಲರಿಗೆ ಯಾವುದೇ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಆರೋಪಿಸಿದ ಅವರು, ಮುಂದುವರಿಯುತ್ತಿರುವ ಬೆಲೆ ಏರಿಕೆಯಿಂದಾಗಿ ಬಡವರು ಹಾಗೂ ವಿಶೇಷಚೇತನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪಾದಯಾತ್ರೆಯು ವಿಧಾನಸೌಧದವರೆಗೂ ಮುಂದುವರಿಯಲಿದ್ದು, ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಅಂಗವಿಕಲರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದರು. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪ್ರತಿಯೊಂದರ ಬೆಲೆಯೂ ಗಗನಕ್ಕೇರಿದ್ದು, ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಶೋಕ್ ಕಿಡಿಕಾರಿದರು.

ಇದೇ ವೇಳೆ, ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮಾತನಾಡಿದ ಅವರು, ಎಫ್‌ಐಆರ್ ದಾಖಲಿಸದೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಬಣಗಳ ನಡುವಿನ ರಾಜಕೀಯ ತಿಕ್ಕಾಟದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಈ ಕುರಿತು ಸಮಗ್ರ ತನಿಖೆ ನಡೆದರೆ ದೊಡ್ಡ ಮಟ್ಟದ ರಾಜಕೀಯ ಅಲ್ಲೋಲಕಲ್ಲೋಲ ಉಂಟಾಗಲಿದೆ ಎಂದು ಎಚ್ಚರಿಸಿದರು.

Tags:

error: Content is protected !!