Vijaypura

ಜಿಪಂ, ತಾಪಂ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿ: ಎಸ್‌.ಎಂ.ಪಾಟೀಲ ಗಣಿಹಾರ

Share

ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ ಗಣಿಹಾರ ಒತ್ತಾಯಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ ಒಂದು ಜಿಲ್ಲಾ ಪಂಚಾಯಿತಿ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡಬೇಕು. ತಾಲೂಕು ಪಂಚಾಯಿತಿಯಲ್ಲಿಯೂ ಹೆಚ್ಚಿನ ಟಿಕೆಟ್‌ಗಳನ್ನು ನೀಡಬೇಕು. ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವುದರಿಂದ ಸೂಕ್ತ ಪ್ರಾತಿನಿಧ್ಯ ನೀಡಿದರೆ ಅವರು ಆಯ್ಕೆಯಾಗಲು ಅನುಕೂಲವಾಗಲಿದೆ ಎಂದರು. ಕಳೆದ 40 ವರ್ಷಗಳಲ್ಲಿ ಜಿಲ್ಲೆಯಲ್ಲಿ ಕೇವಲ ನಾಲ್ವರು ಮಾತ್ರ ಜಿಪಂ ಸದಸ್ಯರಾಗಿದ್ದಾರೆ. ಯುವಜನಾಂಗ ಪರ್ಯಾಯ ಮಾರ್ಗ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸಂವಿಧಾನ, ಸಮಾನತೆ ಹಾಗೂ ಜಾತ್ಯತೀತತೆಯ ರಕ್ಷಣೆಗಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸುತ್ತಿದ್ದು, ಪಕ್ಷದ ನಾಯಕರು ಅವರಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು. ಜಿಪಂ, ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಸಮಿತಿ ರಚಿಸಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಯಿರುವ ಕ್ಷೇತ್ರಗಳನ್ನು ಗುರುತಿಸಲಾಗುವುದು. ಮುಂದಿನ ವಾರ ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರ ಸಭೆ ಕರೆದು ಕ್ಷೇತ್ರಗಳ ಪ್ರಾಬಲ್ಯ ಪರಿಶೀಲಿಸಿ ಪಟ್ಟಿ ಸಿದ್ಧಪಡಿಸಲಾಗುವುದು. ಈ ಬಾರಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ದೊರೆಯುವ ವಿಶ್ವಾಸವಿದೆ ಎಂದರು. ಮುಖಂಡ ಎಂ.ಸಿ.ಮುಲ್ಲಾ ಮಾತನಾಡಿ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ನೀಡಬೇಕು. ಜಿಪಂ, ತಾಪಂ ಸಂಸ್ಥೆಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳು ಅನುಷ್ಠಾನಗೊಳ್ಳುವುದರಿಂದ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸುವುದು ಅಗತ್ಯ. ಎಲ್ಲ ವರ್ಗಗಳಿಗೂ ನ್ಯಾಯ ದೊರೆಯುವಂತೆ ಕಾಂಗ್ರೆಸ್ ನಾಯಕರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Tags:

error: Content is protected !!