ಚುನಾವಣಾ ಆಯೋಗವು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ದೇಶಾದ್ಯಂತ ‘ವೋಟ್ ಬಚಾವೋ, ದೇಶ್ ಬಚಾವೋ’ ಜಾಗೃತಿ ಅಭಿಯಾನಕ್ಕೆ ಕಾಂಗ್ರೆಸ್ ಕರೆ ನೀಡಿದೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಎಐಸಿಸಿ ವೀಕ್ಷಕ ಸಂತೋಷ್ಕುಮಾರ್, ಮುಂಬರುವ ದಿನಗಳಲ್ಲಿ ಈ ಹೋರಾಟವನ್ನು ತಳಮಟ್ಟದಿಂದ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ವೀಕ್ಷಕ ಸಂತೋಷ್ಕುಮಾರ್ ಮಾತನಾಡಿ, ಚುನಾವಣಾ ಆಯೋಗವು ಮತ ಕಳವಿಗೆ ಸಹಕರಿಸುವ ಮೂಲಕ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಮುಂದಿನ 1-2 ತಿಂಗಳುಗಳ ಕಾಲ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುವುದು. ದೇಶದ ಅರ್ಹ ಪ್ರತಿಯೊಬ್ಬ ಪ್ರಜೆಯ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ನೋಡುವುದು ಹಾಗೂ ಯಾರೊಬ್ಬರೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಚ್ಚರವಹಿಸುವುದು ಈ ಜಾಗೃತಿ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಬೆಳಗಾವಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ್ ನಾವಲಗಟ್ಟಿ, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಅವರ ಹೋರಾಟದ ಮುಂದಿನ ಭಾಗವಾಗಿ ನವೆಂಬರ್ 1 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’ ಒಕ್ಕೂಟದ ಬೃಹತ್ ಮಹಾರ್ಯಾಲಿ ನಡೆಯಲಿದ್ದು, ಜಿಲ್ಲೆಯ ಬೂತ್ ಮಟ್ಟದವರೆಗೂ ಈ ಹೋರಾಟವನ್ನು ಕೊಂಡೊಯ್ಯಲಾಗುವುದು ಎಂದರು. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಹಾಗೂ ಮಿಸ್ಸಿಂಗ್ ಮತದಾರರ ಹೆಸರುಗಳನ್ನು ತಕ್ಷಣವೇ ಪಟ್ಟಿಗೆ ಮರುಸ್ಥಾಪಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಫಾರಂ-7 ದುರುಪಯೋಗ ಮತ್ತು ಗಂಭೀರ ಆರೋಪಗಳ ಕುರಿತು ಮುಕ್ತ ತನಿಖೆಯಾಗಬೇಕು, ಈ ಎಲ್ಲಾ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ನಾಯಕರು ಒತ್ತಾಯಿಸಿದರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಚುನಾವಣಾ ಆಯೋಗವು ಪಕ್ಷಪಾತವಿಲ್ಲದೆ ಪಾರದರ್ಶಕವಾಗಿ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.
