Vijaypura

ಕಬ್ಬಿನ ಬೆಲೆ ಹೆಚ್ಚಳಕ್ಕೆ ರೈತರ ಹೋರಾಟದ ಕಿಚ್ಚು!

Share

ವಿಜಯಪುರ ಜಿಲ್ಲೆಯಲ್ಲಿ ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರೊಚ್ಚಿಗೆದ್ದಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಮರ ಸಾರಿದ್ದಾರೆ. ಜಿಲ್ಲೆಯ ಕಾರಜೋಳದ ಬಸವೇಶ್ವರ ಸಕ್ಕರೆ ಕಾರ್ಖಾನೆ ಸೇರಿದಂತೆ ಹತ್ತು ಸಕ್ಕರೆ ಕಾರ್ಖಾನೆಗಳ ಸಕ್ಕರೆ ಗೋದಾಮುಗಳಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಸಕ್ಕರೆ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಹಾಗಾದರೆ ರೈತರ ಪ್ರಮುಖ ಬೇಡಿಕೆಗಳೇನು? ಸರ್ಕಾರಕ್ಕೆ ನೀಡಿರುವ ಎಚ್ಚರಿಕೆ ಏನು? ಎನ್ನುವ ಕುರಿತು ಇಲ್ಲಿದೆ ಒಂದು ವರದಿ..

ಕಬ್ಬಿನ ಬೆಲೆ ನಿಗದಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೋರಾಟಕ್ಕಿಳಿದಿದೆ. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆಜಿಗೆ 31 ರೂಪಾಯಿಯಿಂದ 60 ರೂಪಾಯಿಗೆ ಹೆಚ್ಚಿಸಬೇಕು. ಗೃಹ ಬಳಕೆಯ ಸಕ್ಕರೆಗೆ 60 ರೂಪಾಯಿ ಹಾಗೂ ಇತರೆ ಬಳಕೆಯ ಸಕ್ಕರೆಗೆ 100 ರೂಪಾಯಿ ದರ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಖರೀದಿಗೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ಬೇಡಿಕೆ ಈಡೇರದಿದ್ದರೆ ಸಕ್ಕರೆ ಮಾರಾಟ ಬಂದ್ ಎಚ್ಚರಿಕೆ ನೀಡಿದ್ದು ಸಂಘಟನೆಯ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಅವರ ಸೂಚನೆಯಂತೆ ವಿಜಯಪುರ ಜಿಲ್ಲೆಯ ಹತ್ತು ಸಕ್ಕರೆ ಕಾರ್ಖಾನೆಗಳ ಸಕ್ಕರೆ ಗೋದಾಮುಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಕಾರಜೋಳ, ಆಲಮೇಲ, ಚಡಚಣ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೈತರು ಹೋರಾಟ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಕಬ್ಬಿನ ಬೆಲೆ ನಿಗದಿ ಕುರಿತು ನಡೆಯಲಿರುವ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಲ್ಲಿ ಉತ್ಪಾದನೆಯಾಗುವ ಸಕ್ಕರೆಯನ್ನು ಮಾರುಕಟ್ಟೆಗೆ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಕೇವಲ ವಿಜಯಪುರ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದ 81 ಸಕ್ಕರೆ ಕಾರ್ಖಾನೆಗಳಲ್ಲಿಯೂ ಇದೇ ಮಾದರಿಯ ಹೋರಾಟ ನಡೆಯುತ್ತಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ಒಟ್ನಲ್ಲಿ ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಹೋರಾಟದ ಕಿಚ್ಚು ಹಚ್ಚಿದ್ದಾರೆ. ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಬೀಗ ಜಡಿದಿರುವ ರೈತರು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶ ನೀಡಿದ್ದಾರೆ. ಈಗ ರೈತರ ಆಕ್ರೋಶಕ್ಕೆ ಸರ್ಕಾರ ಸ್ಪಂದಿಸುತ್ತದೆಯೇ? ರೈತರ ಬೇಡಿಕೆಗಳಿಗೆ ಪರಿಹಾರ ಸಿಗುತ್ತದೆಯೇ? ಅಥವಾ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.

Tags:

error: Content is protected !!