ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಕಬ್ಬಿನ ನ್ಯಾಯಯುತ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಸ್ವಾಭಿಮಾನಿ ಶೆತಕರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆಯುವ ಮೂಲಕ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾಭಿಮಾನಿ ಶೆತಕರಿ ಸಂಘಟನೆಯ ಸಂಸ್ಥಾಪಕ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಅವರ ನೇತೃತ್ವದಲ್ಲಿ ಸಾವಿರಾರು ರೈತರು ಬೀದಿಗಿಳಿದು ಹೋರಾಟ ನಡೆಸಿದರು. ಕೊಲ್ಲಾಪುರ ಸಮೀಪದ ಕಿನ್ನಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಬ್ಬಿಗೆ ಪ್ರತಿ ಟನ್ಗೆ ಸೂಕ್ತ ಮತ್ತು ಲಾಭದಾಯಕ ಬೆಲೆ ನಿಗದಿಪಡಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.
ರೈತರು ಹೆದ್ದಾರಿ ತಡೆದು ಧರಣಿ ಕುಳಿತಿದ್ದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೆದ್ದಾರಿಯ ಬದಿಗಳಲ್ಲಿ ಕಿಲೋಮೀಟರ್ಗಟ್ಟಲೆ ಸರಕು ಸಾಗಣೆ ಲಾರಿಗಳು, ಕೆಎಸ್ಆರ್ಟಿಸಿ/ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಮಹಾರಾಷ್ಟ್ರ ಎಸ್ಟಿ ಬಸ್ಗಳು ಹಾಗೂ ಖಾಸಗಿ ವಾಹನಗಳು ಸಾಲಾಗಿ ನಿಂತಿದ್ದು, ಪ್ರಯಾಣಿಕರು ಹಾಗೂ ಚಾಲಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಕಬ್ಬಿನ ಬೆಲೆ ಕುರಿತು ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತ ನಾಯಕರು ಎಚ್ಚರಿಸಿದ್ದಾರೆ.
