Belagavi

ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ-2026

Share

ಯುವಶಕ್ತಿ ಒಗ್ಗೂಡಿದರೆ ದೇಶದಲ್ಲಿ ಮಹತ್ವರ ಬದಲಾವಣೆ ತರಲು ಸಾಧ್ಯ. ಯುವಕರು ಮನಸ್ಸು ಮಾಡಿದರೆ ದೇಶವನ್ನು ಯಾವುದೇ ದಿಕ್ಕಿನಲ್ಲಿಯಾದರೂ ಮುನ್ನಡೆಸುವ ಶಕ್ತಿ ಹೊಂದಿದ್ದಾರೆ. ಯುವ ಸಮುದಾಯದಲ್ಲಿ ಸಂಸದೀಯ ವ್ಯವಸ್ಥೆಯ ಅರಿವು, ಸಂವಿಧಾನದ ಜ್ಞಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಅವಶ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಎನ್. ಶಿವಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಮಂಗಳವಾರ (ನವೆಂಬರ್ 03) ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಯುವ ಸಂಸತ್ತು ಸ್ಪರ್ಧೆ-2026 ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂವಿಧಾನ ಹಾಗೂ ರಾಷ್ಟ್ರದ ರಕ್ಷಣೆ: ಯುವಕರು ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಸಂರಕ್ಷಣೆ ಹಾಗೂ ರಾಷ್ಟ್ರದ ಏಕತೆ ಮತ್ತು ಅಖಂಡತೆಯ ರಕ್ಷಣೆ ಉದ್ದೇಶಕ್ಕಾಗಿ ಒಗ್ಗೂಡಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು.

ಅಬ್ರಹಾಂ ಲಿಂಕನ್ ವ್ಯಾಖ್ಯಾನ: ಪ್ರಜಾಪ್ರಭುತ್ವವೆಂದರೆ ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ನಡೆಯುವ ಆಡಳಿತ ವ್ಯವಸ್ಥೆಯಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರಜೆಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ನಿರ್ಮಾಣ ಹಾಗೂ ಅದರ ಪರಿಣಾಮಕಾರಿ ಅನುಷ್ಠಾನದಲ್ಲಿ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ.

ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಇಂತಹ ಅವಕಾಶಗಳನ್ನು ಯುವ ಸಮುದಾಯಕ್ಕೆ ಒದಗಿಸುವ ಉದ್ದೇಶದಿಂದ ಸರ್ಕಾರ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಿದೆ.

ಶೈಕ್ಷಣಿಕ ಹಾಗೂ ಸಾಮಾಜಿಕ ಜವಾಬ್ದಾರಿ: ಶೈಕ್ಷಣಿಕ ಚಟುವಟಿಕೆಯೊಂದಿಗೆ ಜೀವನದ ವಾಸ್ತವತೆಯನ್ನು ಅರಿತುಕೊಂಡು, ಭಾರತೀಯ ಪ್ರಜೆಯಾಗಿ ನಮ್ಮ ಜವಾಬ್ದಾರಿಗಳನ್ನು ಗುರುತಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜೆ. ಗಂಗಾಯಿ ಹೇಳಿದರು. ದೇಶದಲ್ಲಿ ಜನಿಸಿದ ಪ್ರತಿಯೊಬ್ಬ ನಾಗರಿಕನಿಗೂ ರಾಷ್ಟ್ರದ ಏಕತೆ, ಸಮಗ್ರತೆ ಹಾಗೂ ಅಖಂಡತೆಯನ್ನು ಕಾಪಾಡುವ ಜವಾಬ್ದಾರಿ ಇದೆ ಎಂದರು.

ಪ್ರಜಾಪ್ರಭುತ್ವ ಮೌಲ್ಯಗಳ ಅರಿವು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಚನ್ನಯ್ಯನವರ ತಿಳಿಸಿದರು.

ವಿದ್ಯಾರ್ಥಿಗಳ ಅಣಕು ಸಂಸತ್ ಪ್ರದರ್ಶನ
ಯುವ ಸಂಸತ್ತು ಕಾರ್ಯಕ್ರಮದಲ್ಲಿ ಪದವಿ, ಪದವಿ ಪೂರ್ವ ಹಾಗೂ ಕಾನೂನು ಪದವಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 230 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ವಿದ್ಯಾರ್ಥಿಗಳು ಅಣಕು ಸಂಸತ್ ಅಧಿವೇಶನವನ್ನು ಪ್ರದರ್ಶಿಸುವ ಮೂಲಕ ಸಂಸದೀಯ ಕಲಾಪಗಳು, ಚರ್ಚಾ ವಿಧಾನ, ಪ್ರಶ್ನೋತ್ತರ ಪ್ರಕ್ರಿಯೆ ಹಾಗೂ ಪ್ರಜಾಪ್ರಭುತ್ವದ ಕಾರ್ಯವೈಖರಿಯನ್ನು ಪ್ರಾಯೋಗಿಕವಾಗಿ ಅನಾವರಣಗೊಳಿಸಿದರು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಸಂಸದೀಯ ವ್ಯವಸ್ಥೆ, ಸಂವಿಧಾನದ ಆಶಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವೀಂದ್ರ ಬಂಗಾರಪ್ಪನವರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನೆಗೊಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಂ.ಎಂ.ಕಾಂಬಳೆ, ಶಿಕ್ಷಣ ಇಲಾಖೆ ಅಧಿಕಾರಿ ಬಸವರಾಜ ಮಿಲಾನಟ್ಟಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

Tags:

error: Content is protected !!