ರೈತ ಮುಖಂಡ ಚೂನ್ನಪ್ಪ ಪೂಜೇರಿ ಅವರ ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಿಕ್ಕೋಡಿ ತಾಲೂಕಿನಾದ್ಯಂತ ರೈತರ ಆಕ್ರೋಶ ಭುಗಲೆದ್ದಿದ್ದು, ನಾಗರಮುನ್ನೂಳಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಚಿಕ್ಕೋಡಿ ತಾಲೂಕು ರೈತ ಸಂಘದ ಅಧ್ಯಕ್ಷ ಮನೋಜ ಮನಗೂಳಿ ಅವರ ನೇತೃತ್ವದಲ್ಲಿ ನಾಗರಮುನ್ನೂಳಿಯ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ನೂರಾರು ರೈತರು ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಮನೋಜ ಮನಗೂಳಿ ಅವರು ರೈತರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಮುಖಂಡ ಚೂನ್ನಪ್ಪ ಪೂಜೇರಿ ಅವರನ್ನು ಅನ್ಯಾಯವಾಗಿ ವಶಕ್ಕೆ ಪಡೆದಿರುವುದು ಖಂಡನೀಯ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ರೈತರ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿದೆ” ಎಂದು ಕಿಡಿಕಾರಿದರು.
ಪ್ರತಿಭಟನಾ ಸ್ಥಳದಲ್ಲಿ ನೆರೆದಿದ್ದ ರೈತರು ರಾಜ್ಯ ಸರ್ಕಾರದ ವಿಫಲ ನೀತಿಗಳ ವಿರುದ್ಧ ಹಾಗೂ ಪೊಲೀಸರ ನಡವಳಿಕೆ ವಿರುದ್ಧ ಜೋರು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.ರೈತರು ನಿಪ್ಪಾಣಿ-ಮುಧೋಳ ಮುಖ್ಯ ರಸ್ತೆಯಲ್ಲಿ ಧರಣಿ ಕುಳಿತಿದ್ದರಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಕೈಗೊಂಡಿದ್ದು, ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.ಚೂನ್ನಪ್ಪ ಪೂಜೇರಿ ಅವರನ್ನು ತಕ್ಷಣವೇ ಬೇಷರತ್ತಾಗಿ ಬಿಡುಗಡೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಉಗ್ರ ಸ್ವರೂಪದ ಹೋರಾಟ ರೂಪಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
