Vijaypura

ವಿಜಯಪುರದಲ್ಲಿ ಅಂಗನವಾಡಿ, ಬಿಸಿಯೂಟ ನೌಕರರ ಹೋರಾಟದ ಎಚ್ಚರಿಕೆ

Share

ಅಂಗನವಾಡಿ ಹಾಗೂ ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಂಗನವಾಡಿ ಕೇಂದ್ರಗಳು ಮತ್ತು ಬಿಸಿಯೂಟ ಸೇವೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷೆ ಎಸ್. ವರಲಕ್ಷ್ಮಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಮತ್ತು ಬಿಸಿಯೂಟ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಡಿಸೆಂಬರ್ 1ರಂದು ದೆಹಲಿಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಹೋರಾಟದ ಪೂರ್ವಭಾವಿಯಾಗಿ ಒಂದು ವಾರದೊಳಗೆ ಎಲ್ಲ ಸಂಸದರಿಗೆ ಬೇಡಿಕೆಗಳ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. 2018ರಿಂದ ಅಂಗನವಾಡಿ ನೌಕರರಿಗೆ ಹಾಗೂ 2011ರಿಂದ ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ. ಮತ್ತೊಂದೆಡೆ, ಈ ಯೋಜನೆಗಳಿಗೆ ನೀಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. ಇದರಿಂದ ನೌಕರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನು ಅಂಗನವಾಡಿ ನೌಕರರನ್ನು ನಿಗದಿತ ಕೆಲಸಗಳ ಹೊರತಾಗಿ ವಿವಿಧ ಹೆಚ್ಚುವರಿ ಕಾರ್ಯಗಳಿಗೆ ಬಳಸುವುದನ್ನು ತಕ್ಷಣ ನಿಲ್ಲಿಸಬೇಕು. ಇದರಿಂದ ಅಂಗನವಾಡಿ ಕೇಂದ್ರಗಳ ಮೂಲ ಕಾರ್ಯಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ. ಐಸಿಡಿಎಸ್ ಯೋಜನೆಯನ್ನು ಕಾಯಂಗೊಳಿಸಿ, ಗುಣಮಟ್ಟ ಹೆಚ್ಚಿಸುವುದರ ಜತೆಗೆ ಅನುದಾನವನ್ನೂ ಹೆಚ್ಚಿಸಬೇಕು. ಅಂಗನವಾಡಿ ನೌಕರರನ್ನು ಸಿ ಮತ್ತು ಡಿ ದರ್ಜೆಯ ಸರ್ಕಾರಿ ನೌಕರರೆಂದು ಪರಿಗಣಿಸಿ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಹೋರಾಟದ ಫಲವಾಗಿ ಈಗಾಗಲೇ 10 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಾಗಿದೆ. ಉಳಿದ ಅಂಗನವಾಡಿಗಳಿಗೂ ಈ ವ್ಯವಸ್ಥೆಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹7 ಸಾವಿರ ವೇತನ ನೀಡುವುದಾಗಿ ಭರವಸೆ ನೀಡಿತ್ತು. ಈ ಭರವಸೆಯನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು. ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಆಹಾರ ವಿತರಣಾ ವ್ಯವಸ್ಥೆಯಲ್ಲಿ ಬದಲಾವಣೆ ತಂದು ಸ್ಥಳೀಯ ಆಹಾರ ಪದ್ಧತಿಗೆ ಆದ್ಯತೆ ನೀಡಬೇಕು. ನೌಕರರ ಮೇಲಿನ ಹೆಚ್ಚುವರಿ ಕೆಲಸದ ಹೊರೆ ನಿಲ್ಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಸ್. ವರಲಕ್ಷ್ಮಿ ಎಚ್ಚರಿಕೆ ನೀಡಿದರು.

Tags:

error: Content is protected !!