ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸೂಕ್ತ ಬೆಂಬಲ ಬೆಲೆಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರಂಭವಾಗಿರುವ ರೈತರ ಪ್ರತಿಭಟನೆ ಇಂದು 6ನೇ ದಿನಕ್ಕೆ ಕಾಲಿಟ್ಟಿದ್ದು, ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಜಿಲ್ಲಾಡಳಿತಕ್ಕೆ ಖಡಕ್ ಎಚ್ಚರಿಕೆ ರವಾನಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತತ 6ನೇ ದಿನವೂ ಮುಂದುವರಿದಿದೆ. ಹಬ್ಬದ ರಜೆಯ ಬಳಿಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿರುವ ಸಾವಿರಾರು ರೈತರು, ರಾಯಣ್ಣ ವೃತ್ತದಿಂದ ತಾಲೂಕು ಆಡಳಿತ ಕಚೇರಿಯವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು. ಪ್ರಸಕ್ತ ಸಾಲಿಗೆ ಪ್ರತಿ ಟನ್ ಕಬ್ಬಿಗೆ ಕನಿಷ್ಠ 4,200 ರೂಪಾಯಿ ದರ ನಿಗದಿಪಡಿಸಬೇಕು ಮತ್ತು ರಾಜ್ಯ ಸರ್ಕಾರ ತಕ್ಷಣವೇ ‘ಎಸ್.ಎ.ಪಿ’ (ರಾಜ್ಯ ಸಮ್ಮತ ಬೆಲೆ) ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕಬ್ಬಿನ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ರೈತ ಸಂಘಟನೆಗಳ ನಾಯಕರು ತೀವ್ರ ಆಕ್ರೋಶ ಹೊರಹಾಕಿದರು. ಅಧಿಕೃತವಾಗಿ ದರ ಘೋಷಣೆ ಮಾಡದೆ ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಬಿಡುವುದಿಲ್ಲ ಎಂದು ಎಚ್ಚರಿಸಿದ ರೈತರು, ಸಾವಿರಾರು ಟ್ರ್ಯಾಕ್ಟರ್ಗಳೊಂದಿಗೆ ರಸ್ತೆಗಿಳಿದು ಶಕ್ತಿ ಪ್ರದರ್ಶನ ಮಾಡಿದರು. ಬೆಳೆಗಾರರ ನ್ಯಾಯಯುತ ಬೇಡಿಕೆಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಇಡೀ ಜಿಲ್ಲಾದ್ಯಂತ ವಿಸ್ತರಿಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

