ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳು, ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಅದೇ ಸಮುದಾಯಗಳ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಎಷ್ಟು ಸರಿ ಎಂದು ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ಪ್ರಶ್ನಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಅಹಿಂದ ಸಮುದಾಯಗಳ ಮತ ಹಾಗೂ ಬೆಂಬಲದಿಂದ ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳು, ಅಧಿಕಾರ ಪಡೆದ ನಂತರ ಅವರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಸಮುದಾಯಗಳ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಆದ್ಯತೆ ನೀಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ರಾಜಕೀಯ ಪಕ್ಷಗಳು ಕೇವಲ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುವುದಕ್ಕೆ ಸೀಮಿತವಾಗದೆ, ಅಧಿಕಾರದಲ್ಲಿದ್ದಾಗಲೂ ಅಹಿಂದ ಸಮುದಾಯಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಯಲ್ಲಪ್ಪ ಹೆಗಡೆ ಒತ್ತಾಯಿಸಿದರು.
