ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಮತ್ತು ಉಚಿತ ನೆರವು ತಲುಪಿಸುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ – 2026’ನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಣ್ಯರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜನಸ್ನೇಹಿ ನ್ಯಾಯದಾನದ ಕುರಿತು ಮಹತ್ವದ ಚರ್ಚೆ ನಡೆಯಿತು.
ಬೆಳಗಾವಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ – 2026’ ಯಶಸ್ವಿಯಾಗಿ ಜರುಗಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ ಅವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹಿಂದೆ ಕೇವಲ ನ್ಯಾಯಾಲಯದಲ್ಲಿ ಪ್ರಕರಣ ಇರುವವರಿಗೆ ಮಾತ್ರ ಕಾನೂನು ನೆರವು ನೀಡಲಾಗುತ್ತಿತ್ತು. ಆದರೆ ಈಗ ವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು,

ಸಮಾಜದ ಪ್ರತಿಯೊಬ್ಬರಿಗೂ ಕಾನೂನು ಅರಿವು ಮೂಡಿಸುವುದು ನಮ್ಮ ಗುರಿಯಾಗಿದೆ ಎಂದರು. ಅಲ್ಲದೆ, ವರ್ಷಕ್ಕೆ ನಾಲ್ಕು ಬಾರಿ ಸಾಮಾನ್ಯ ಲೋಕ ಅದಾಲತ್ ಜೊತೆಗೆ ಎನ್ಐ ಆಕ್ಟ್ ಹಾಗೂ ಭೂಸ್ವಾಧೀನ ಪ್ರಕರಣಗಳಿಗಾಗಿ ವಿಶೇಷ ಲೋಕ ಅದಾಲತ್ಗಳನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಬಿ.ಜೆ. ಗಂಗಾಯಿ ವಹಿಸಿದ್ದರೆ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಭಾಷ್ ಸಂಕದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಗಣ್ಯರನ್ನು ಸ್ವಾಗತಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಚಿನ್ ಆರ್. ಶಿವಣ್ಣವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
