ನಿಪ್ಪಾಣಿ ನಗರದ ಪ್ರಮುಖ ರಸ್ತೆಗಳು ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅತಿಕ್ರಮಣಗಳಿಂದ ಸಂಚಾರ ದಟ್ಟಣೆ ಮತ್ತು ಪಾದಚಾರಿಗಳಿಗೆ ಉಂಟಾಗುತ್ತಿದ್ದ ತೊಂದರೆಯನ್ನು ತಪ್ಪಿಸಲು ನಗರಸಭೆ ಆಡಳಿತವು ಭರ್ಜರಿ ತೆರವು ಕಾರ್ಯಾಚರಣೆ ನಡೆಸಿತು. ನಗರಸಭೆ ಆಯುಕ್ತ ಗಣಪತಿ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅತಿಕ್ರಮಣದಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.

ನಗರದ ಅತ್ಯಂತ ಜನನಿಬಿಡ ಪ್ರದೇಶಗಳಾದ ಕೋಟಿವಾಲೆ ಕಾರ್ನರ್, ದಲಾಲ್ ಪೇಠ್, ಚನ್ನಮ್ಮ ಸರ್ಕಲ್ ಹಾಗೂ ಚಾಟೆ ಮಾರ್ಕೆಟ್ ವ್ಯಾಪ್ತಿಯಲ್ಲಿ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡವು ಏಕಕಾಲಕ್ಕೆ ಕಾರ್ಯಾಚರಣೆಗಿಳಿಯಿತು. ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ಇಡಲಾಗಿದ್ದ ಅಂಗಡಿ ಸಾಮಗ್ರಿಗಳು ಮತ್ತು ತಾತ್ಕಾಲಿಕ ಶೆಡ್ಗಳನ್ನು ತಂಡವು ತೆರವುಗೊಳಿಸಿತು.
ಕೆಲವು ವ್ಯಾಪಾರಿಗಳು ಹಾಗೂ ಅಂಗಡಿಕಾರರು ರಸ್ತೆಯಂಚಿನವರೆಗೂ ತಮ್ಮ ವಸ್ತುಗಳನ್ನು ಹರಡುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿತ್ತು. ಇದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ನಗರಸಭೆಯು ಈ ಕಠಿಣ ಕ್ರಮ ಕೈಗೊಂಡಿದೆ.

ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವುದು ಮತ್ತು ಪಾದಚಾರಿಗಳಿಗೆ ಮುಕ್ತ ಓಡಾಟಕ್ಕೆ ಅವಕಾಶ ಕಲ್ಪಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ನಗರಸಭೆ ಮೂಲಗಳು ತಿಳಿಸಿವೆ.ನಗರಸಭೆಯ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ತೆರವು ಕಾರ್ಯಾಚರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ನಗರದ ಎಲ್ಲಾ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ನಿರಂತರವಾಗಿ ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
