ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಚಲಿಸುತ್ತಿದ್ದ ಸಾರಿಗೆ ಬಸ್ನ ಟೈರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ಮಧ್ಯದ ಡಿವೈಡರ್ ಮೇಲೆ ಹತ್ತಿರುವ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆ ಹಾಗೂ ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮುಂಜಾನೆ ಗುರ್ಲಾಪೂರ ಮಾರ್ಗವಾಗಿ ಅಥಣಿಗೆ ತೆರಳುತ್ತಿದ್ದ ಸಾರಿಗೆ ಇಲಾಖೆಯ ಬಸ್ನ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಮೇಲೆ ಹತ್ತಿದೆ. ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಟೈರ್ ಬ್ಲಾಸ್ಟ್ ಆದ ತಕ್ಷಣ ಬಸ್ ಡಿವೈಡರ್ ಏರಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅದೃಷ್ಟವಶಾತ್ ಈ ಅವಘಡದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಲಿ ಅಥವಾ ಪ್ರಾಣಾಪಾಯವಾಗಲಿ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದು, ಘಟನೆಯಿಂದಾಗಿ ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಕೆಲಹೊತ್ತು ಆತಂಕ ಮನೆಮಾಡಿತ್ತು.
