ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ವಿರುದ್ಧ ವಿಜಯಪುರದಲ್ಲಿ ಬಸವಾಭಿಮಾನಿಗಳು ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಬಸವದಳದ ಕಾರ್ಯಕರ್ತರು, ಬಸವಾಭಿಮಾನಿಗಳು ಹಾಗೂ ಲಿಂಗಾಯತ ಸಮಾಜದ ಮುಖಂಡರು ರವಿ ಹಂಜ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ರವಿ ಹಂಜ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶ ಹಾಗೂ ವಚನ ಸಾಹಿತ್ಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಬಸವಾಭಿಮಾನಿ ಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣನವರ ಕುರಿತು ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಸರ್ಕಾರ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರವಿ ಹಂಜ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಸವಣ್ಣನವರ ವಿಚಾರಧಾರೆ ಮತ್ತು ಸಮಾನತೆಯ ಸಂದೇಶಕ್ಕೆ ಅಪಮಾನವಾಗುವಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಸವಾಭಿಮಾನಿಗಳು, ಬಸವದಳದ ಕಾರ್ಯಕರ್ತರು ಹಾಗೂ ಲಿಂಗಾಯತ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
