ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ಹಾಗೂ ಆಡಳಿತದಲ್ಲಿನ ಲೋಪದೋಷಗಳನ್ನು ಸರಿಪಡಿಸುವುದು ಲೋಕಾಯುಕ್ತ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು. ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಆದ್ಯತೆ ನೀಡಲಾಗಿದೆ.

ಎರಡು ದಿನಗಳ ಕಾಲ ದೂರುಗಳ ವಿಚಾರಣೆ ನಡೆಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳನ್ನು ವಿಳಂಬ ಮಾಡಬಾರದು. ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಜನಸ್ನೇಹಿ ಧೋರಣೆ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಕೂಡ ಸುಳ್ಳು ಅಥವಾ ಆಧಾರರಹಿತ ದೂರುಗಳನ್ನು ಸಲ್ಲಿಸದೆ, ಅಗತ್ಯ ದಾಖಲೆ ಹಾಗೂ ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಬೇಕು. ಲೋಕಾಯುಕ್ತ ಸಂಸ್ಥೆಯ ವ್ಯಾಪ್ತಿಗೆ ಬಾರದ ಪ್ರಕರಣಗಳಿಗೆ ಸೂಕ್ತ ಕಾನೂನು ಮಾರ್ಗದರ್ಶನ ನೀಡಲಾಗುವುದು ಎಂದರು. ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಜಿಲ್ಲೆಯ ದೂರುದಾರರು ಬೆಂಗಳೂರಿಗೆ ತೆರಳುವ ತೊಂದರೆ ತಪ್ಪಿಸಲು ಉಪಲೋಕಾಯುಕ್ತರು ಜಿಲ್ಲೆಗೆ ಆಗಮಿಸಿ ಸ್ಥಳೀಯವಾಗಿಯೇ ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳಿಗೆ ದೂರುಗಳ ಕುರಿತು ಅನುಪಾಲನಾ ವರದಿಯೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ ಮೀನಾ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಪ್ರಕಾಶ ವಡ್ಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಬಾಕಿ ಇರುವ ದೂರುಗಳ ವಿಚಾರಣೆ ನಡೆಸಲಾಯಿತು.
