ಬೆಳಗಾವಿಯಲ್ಲಿ ಡಿ.2 ರಿಂದ ನಡೆಯುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನ ಸೌಧದ ಎರಡೂ ಕಿಮೀ ಸುತ್ತಮುತ್ತ ನಿಷೇದಾಜ್ಞೆ ಹೊರಡಿಸಿ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಹೇಳಿದರು.
ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಕಾನೂನಿನ ಪ್ರಕಾರ ಅನುಮತಿ ಪಡೆಯಬೇಕು. ಆದರೆ ಅನುಮತಿ ಇಲ್ಲದೆ ಗುಂಪು ಸೇರಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸುವುದು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಬಿಎನ್ಎಸ್ ಸೆಕ್ಷನ್ 163ರ ಅಡಿಯಲ್ಲಿ ಜಾರಿಗೊಳಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿ ಕಾನೂನುಬಾಹಿರವಾಗಿ ಗುಂಪು ಸೇರುವುದು, ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಣೆ ವಾಹನಗಳು, ಅಗತ್ಯ ವಸ್ತುಗಳ ಸಾಗಣೆ ಹಾಗೂ ಸಾರ್ವಜನಿಕರ ಸಂಚಾರ ನಿರಂತರವಾಗಿ ನಡೆಯುತ್ತಿರುತ್ತದೆ. ರಸ್ತೆ ತಡೆಯಿಂದ ಸಾಮಾನ್ಯ ಜನರಿಗೆ ಮತ್ತು ಅಗತ್ಯ ಸೇವೆಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾನೂನುಬಾಹಿರವಾಗಿ ರಸ್ತೆ ತಡೆ ನಡೆಸಲು ಅವಕಾಶ ನೀಡುವುದಿಲ್ಲ ಎಂದರು.
