bagalkot

ಬನಹಟ್ಟಿಯಲ್ಲಿ ‘ಮತ ಉಳಿಸಿ, ದೇಶ ಉಳಿಸಿ’ ಕಿಚ್ಚು; SIR ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ!

Share

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದೆ. ಬನಹಟ್ಟಿಯಲ್ಲಿ ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನದಡಿ ಬೀದಿಗಿಳಿದ ಕೈ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅರ್ಹ ಮತದಾರರ ಹೆಸರನ್ನು ಕೈಬಿಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ತೇರದಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನದ ಅಡಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಿದ್ದು ಕೊಣ್ಣೂರ ನೇತೃತ್ವದಲ್ಲಿ ನಗರದ ಈಶ್ವರಲಿಂಗ ಮೈದಾನದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಹಾಗೂ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಉದ್ದೇಶಪೂರ್ವಕವಾಗಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಆತಂಕ ಎದುರಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ವಿಶೇಷವಾಗಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಈ ವರ್ಗಗಳ ಮತಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರತಿಭಟನೆಯ ಅಂತ್ಯದಲ್ಲಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Tags:

error: Content is protected !!