Belagavi

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಕೌಂಟ್‌ಡೌನ್: ಸುವರ್ಣ ಸೌಧದಲ್ಲಿ ಭರದ ಸಿದ್ಧತೆ

Share

ಬೆಳಗಾವಿಯಲ್ಲಿ ಡಿಸೆಂಬರ್ 2 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅಧಿವೇಶನವನ್ನು ಅತ್ಯಂತ ಯಶಸ್ವಿಯಾಗಿ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಇಂದು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.

ಡಿಸೆಂಬರ್ 2 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಈಗಾಗಲೇ ಭರದಿಂದ ಪೂರ್ವ ಸಿದ್ಧತೆಗಳು ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳ ಪ್ರಗತಿಯನ್ನು ಖುದ್ದಾಗಿ ವೀಕ್ಷಿಸಲು ಇಂದು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧಕ್ಕೆ ಆಗಮಿಸಿದ ಉಭಯ ಗಣ್ಯರನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಅಧಿವೇಶನಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳು ಈ ವೇಳೆ ಪ್ರಾಥಮಿಕ ಮಾಹಿತಿಯನ್ನು ಒದಗಿಸಿದರು.

ಬಳಿಕ ಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಮತ್ತು ಸಭಾಪತಿ ಸಲೀಂ ಅಹ್ಮದ್ ಅವರು ವಿಧಾನಸಭೆ ಹಾಗೂ ವಿಧಾನ ಪರಿಷತ್ ಸಭಾಂಗಣಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಸಭಾಧ್ಯಕ್ಷರ ಪೀಠ, ಸಚಿವರು ಮತ್ತು ಶಾಸಕರ ಆಸನಗಳ ವ್ಯವಸ್ಥೆ, ಅಧಿಕಾರಿಗಳ ವಲಯ, ಮಾಧ್ಯಮ ಗ್ಯಾಲರಿ ಹಾಗೂ ಸಾರ್ವಜನಿಕರು ವೀಕ್ಷಿಸುವ ಪ್ರೇಕ್ಷಕರ ಗ್ಯಾಲರಿ ಸೇರಿದಂತೆ ಸೌಧದ ಪ್ರತಿಯೊಂದು ಭಾಗವನ್ನೂ ವೀಕ್ಷಿಸಿ ತಾಂತ್ರಿಕ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಭಾಂಗಣದ ಧ್ವನಿವರ್ಧಕ ವ್ಯವಸ್ಥೆ, ಬೆಳಕು, ಸ್ವಚ್ಛತೆ ಹಾಗೂ ಭದ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಂದ ಸವಿವರವಾದ ಮಾಹಿತಿಯನ್ನು ಪಡೆದುಕೊಂಡ ಉಭಯ ಸಭಾಪತಿಗಳು, ಅಧಿವೇಶನ ಆರಂಭವಾಗುವ ಮುನ್ನವೇ ಬಾಕಿ ಇರುವ ಎಲ್ಲಾ ಸಣ್ಣಪುಟ್ಟ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Tags:

error: Content is protected !!