ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಹಾಗೂ ಪ್ರಮುಖ ಹುದ್ದೆಗಳ ನೇಮಕಾತಿ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸಹಿ ಇರುವ ಈ ಪಟ್ಟಿಯಲ್ಲಿ ರಾಜ್ಯದ ಹಲವು ಶಾಸಕರು ಮತ್ತು ಮುಖಂಡರಿಗೆ ಸ್ಥಾನ ನೀಡಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸಹಿ ಹೊಂದಿದ ಪ್ರಕಟಣೆಯಲ್ಲಿ ಕರ್ನಾಟಕದ ವಿವಿಧ ನಿಗಮ, ಮಂಡಳಿ ಮತ್ತು ಇತರ ಪ್ರಮುಖ ಹುದ್ದೆಗಳಿಗೆ ಒಟ್ಟು 18 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಿ. ಶಿವಣ್ಣ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ, ಕೆ. ಷಡಕ್ಷರಿ ಅವರನ್ನು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ, ಪಿ.ಎಂ. ಅಶೋಕ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರನ್ನಾಗಿ ಹಾಗೂ ಎ.ಆರ್. ಕೃಷ್ಣಮೂರ್ತಿ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದರ ಜೊತೆಗೆ ಹಂಪನಗೌಡ ಬಾದರ್ಲಿ (ಕರ್ನಾಟಕ ರಾಜ್ಯ ಉಗ್ರಾಣ ನಿಗಮ), ಡಿ.ಜಿ. ಶಾಂತನ ಗೌಡ (ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ), ಜಿ.ಎಚ್. ಶ್ರೀನಿವಾಸ್ (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ), ಮಹಾಂತೇಶ ಕೌಜಲಗಿ (ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ) ಹಾಗೂ ಎಸ್.ಎನ್. ಸುಬ್ಬಾರೆಡ್ಡಿ (ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) ಅವರನ್ನು ವಿವಿಧ ನಿಗಮಗಳ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ. ಹಾಗೆಯೇ ಬೇಳೂರು ಗೋಪಾಲಕೃಷ್ಣ ಅವರನ್ನು ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕರನ್ನಾಗಿ, ತನ್ವೀರ್ ಸೇಠ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ, ಎನ್.ಎಚ್. ಕೋನರಡ್ಡಿ ಅವರನ್ನು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರನ್ನಾಗಿ, ಬಸನಗೌಡ ದದ್ದಲ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ, ಮಂಜುನಾಥ ಭಂಡಾರಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಮುಖ್ಯ ಸಚೇತಕರನ್ನಾಗಿ, ಅಲ್ಲಮಪ್ರಭು ಪಾಟೀಲ್ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ, ಶ್ಯಾಮ್ ನಾಟೇಕರ್ ಅವರನ್ನು ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ, ಎಚ್.ಸಿ. ಲಲಿತ್ ರಾಘವ್ ಅವರನ್ನು ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ಅಧ್ಯಕ್ಷರನ್ನಾಗಿ ಹಾಗೂ ಸುಭಾಷ್ ರಾಥೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಪಟ್ಟಿಯಲ್ಲಿ ನಮೂದಿಸಲಾಗಿದೆ
