ನಾವಿಬ್ಬರೂ ಉತ್ತರ ಕರ್ನಾಟಕದವರೇ ಆಗಿದ್ದು, ಈ ಭಾಗದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಖಾಸಗಿಯವರಿಗೆ ಅವಕಾಶ ನೀಡದೆ, ಸರ್ಕಾರದ ವತಿಯಿಂದಲೇ ಬೆಳಗಾವಿಯಲ್ಲಿ ಸುಸಜ್ಜಿತ ಶಾಸಕರ ಭವನ ನಿರ್ಮಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಜೊತೆಗೆ ಸುವರ್ಣ ಸೌಧ ಸದಾ ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳಲು ಪ್ರತಿ ತಿಂಗಳು ಶಾಸಕರ ನೇತೃತ್ವದ ಸಮಿತಿ ಸಭೆಗಳನ್ನು ಇಲ್ಲಿಯೇ ನಡೆಸಲಾಗುವುದು” ಎಂದು ಪರಿಷತ್ ಸಭಾಪತಿ ಸಲೀಮ್ ಅಹ್ಮದ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಪೂರ್ವಭಾವಿ ಸಿದ್ಧತೆಗಳನ್ನು ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಜಂಟಿಯಾಗಿ ಪರಿಶೀಲಿಸಿದರು. ಸಭಾಂಗಣದ ವ್ಯವಸ್ಥೆ, ಜನಪ್ರತಿನಿಧಿಗಳ ವಸತಿ, ಊಟೋಪಾಚಾರ, ಸಾರಿಗೆ ಹಾಗೂ ಸ್ವಚ್ಛತೆ ಸೇರಿದಂತೆ ಪ್ರತಿಯೊಂದು ವಿಚಾರದ ಬಗ್ಗೆಯೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರೊಂದಿಗೆ ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ಪೀಕರ್ ಜಿ.ಎಸ್. ಪಾಟೀಲ್, “ಈ ಬಾರಿಯ ಅಧಿವೇಶನದಲ್ಲಿ ಕೇವಲ ಚರ್ಚೆಗಳಷ್ಟೇ ಅಲ್ಲದೆ, ಚರ್ಚೆಯಾದ ವಿಷಯಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆದ್ಯತೆ ನೀಡಲಾಗುವುದು” ಎಂದು ಸ್ಪಷ್ಟಪಡಿಸಿದರು.ಈ ಬಾರಿಯ ಅಧಿವೇಶನದಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲು ಉಭಯ ಸದನಗಳ ಮುಖ್ಯಸ್ಥರು ನಿರ್ಧರಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಪುಸ್ತಕ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಶಾಸಕರು ಮತ್ತು ಸಚಿವರು ತಂಗುವ ವಸತಿ ಸ್ಥಳಗಳಲ್ಲಿ ಪ್ರತಿದಿನ ಯೋಗ ತರಬೇತಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಸದನದ ಕಲಾಪ ವೀಕ್ಷಿಸಲು ಆಗಮಿಸುವ ಶಾಲಾ ಮಕ್ಕಳಿಗೆ ಅಗತ್ಯ ಸೌಲಭ್ಯಗಳ ಜೊತೆಗೆ ಕೃತಕ ಬುದ್ಧಿಮತ್ತೆ (AI) ತರಬೇತಿ ನೀಡುವ ವಿಶೇಷ ಯೋಜನೆಯನ್ನೂ ರೂಪಿಸಲಾಗಿದೆ. ಇನ್ನು ಅಧಿವೇಶನದ ವೇಳೆ ನಡೆಯುವ ಪ್ರತಿಭಟನೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ, ಜಿಲ್ಲಾಮಟ್ಟದ ಸಮಸ್ಯೆಗಳಿದ್ದರೆ ಅವುಗಳನ್ನು ಸ್ಥಳೀಯವಾಗಿಯೇ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸ್ಪೀಕರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇನ್ನು ಪರಿಷತ್ ಸಭಾಪತಿ ಸಲೀಂ ಅಹ್ಮದ್, “ಆಡಳಿತ ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಸೇರಿ ರಾಜ್ಯದ ಹಲವು ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವ ಮೂಲಕ ಅರ್ಥಪೂರ್ಣ ಸದನ ನಡೆಸಲು ಸಹಕರಿಸಬೇಕು” ಎಂದು ಮನವಿ ಮಾಡಿದರು. ಇದೇ ವೇಳೆ, ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಸ್ಪೀಕರ್ ಮತ್ತು ಸಭಾಪತಿ, “ನಾವಿಬ್ಬರೂ ಉತ್ತರ ಕರ್ನಾಟಕದವರೇ ಆಗಿದ್ದು, ಈ ಭಾಗದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಖಾಸಗಿಯವರಿಗೆ ಅವಕಾಶ ನೀಡದೆ, ಸರ್ಕಾರದ ವತಿಯಿಂದಲೇ ಬೆಳಗಾವಿಯಲ್ಲಿ ಸುಸಜ್ಜಿತ ಶಾಸಕರ ಭವನ ನಿರ್ಮಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಜೊತೆಗೆ ಸುವರ್ಣ ಸೌಧ ಸದಾ ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳಲು ಪ್ರತಿ ತಿಂಗಳು ಶಾಸಕರ ನೇತೃತ್ವದ ಸಮಿತಿ ಸಭೆಗಳನ್ನು ಇಲ್ಲಿಯೇ ನಡೆಸಲಾಗುವುದು” ಎಂದು ತಿಳಿಸಿದರು.
