hubbali

ಅಂಜಲಿ ಕೊಲೆ ಆರೋಪಿ ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟ

Share

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಕೊನೆಗೂ ಮಹತ್ವದ ತಿರುವು ಸಿಕ್ಕಿದೆ. 20 ವರ್ಷದ ಯುವತಿ ಅಂಜಲಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ದೋಷಿ ಎಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನವೆಂಬರ್ 25ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲು ನ್ಯಾಯಾಲಯ ದಿನಾಂಕ ನಿಗದಿಪಡಿಸಿದ್ದು, ಇದೀಗ ಆರೋಪಿಗೆ ಯಾವ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಈ ಭೀಕರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಮನೆಯಲ್ಲಿ ಮಲಗಿದ್ದ ಅಂಜಲಿಯನ್ನು ಎಬ್ಬಿಸಿ ಚಾಕುವಿನಿಂದ ಹಲವು ಬಾರಿ ಇರಿದು ಆರೋಪಿ ಹತ್ಯೆಗೈದಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ರಾಜ್ಯಾದ್ಯಂತ ಕೇಳಿಬಂದಿತ್ತು.

ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪವೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅಂಜಲಿಗೆ ಆರೋಪಿ ಬೆದರಿಕೆ ಹಾಕಿದ್ದರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಅಮಾನತು ಕ್ರಮ ಕೈಗೊಳ್ಳಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಒಟ್ಟು 494 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸಿಸಿಟಿವಿ ದೃಶ್ಯಾವಳಿ, ಪ್ರತ್ಯಕ್ಷ ಸಾಕ್ಷಿಗಳು ಸೇರಿದಂತೆ ಒಟ್ಟು 85 ಸಾಕ್ಷಿಗಳನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಅಂಜಲಿ ಮತ್ತು ಆರೋಪಿಯ ನಡುವಿನ ವೈಮನಸ್ಸೇ ಕೊಲೆಗೆ ಕಾರಣ ಎಂಬ ಅಂಶವನ್ನೂ ತನಿಖೆಯಲ್ಲಿ ಪ್ರಸ್ತಾಪಿಸಲಾಗಿತ್ತು.

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ಪ್ರತಿವಾದಗಳನ್ನು ಆಲಿಸಿ, ಸಾಕ್ಷಿಗಳ ಹೇಳಿಕೆ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ದೋಷಿ ಎಂದು ಘೋಷಿಸಿದೆ.

ಸುಮಾರು ಒಂದೂವರೆ ವರ್ಷಗಳ ಕಾಲ ನಡೆದ ಕಾನೂನು ಪ್ರಕ್ರಿಯೆಯ ಬಳಿಕ ಇದೀಗ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಆದರೆ, ಪ್ರಕರಣದ ಅಂತಿಮ ಘಟ್ಟವಾಗಿ ನವೆಂಬರ್ 25ರಂದು ಪ್ರಕಟವಾಗಲಿರುವ ಶಿಕ್ಷೆಯ ಪ್ರಮಾಣದ ಮೇಲೆ ಅಂಜಲಿ ಕುಟುಂಬಸ್ಥರು ಮಾತ್ರವಲ್ಲದೆ, ಇಡೀ ರಾಜ್ಯದ ಜನರ ಗಮನ ನೆಟ್ಟಿದೆ.

ಅಂಜಲಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಕ್ಕೆ ಇದೀಗ ನ್ಯಾಯಾಲಯದ ತೀರ್ಪು ಮಹತ್ವದ ಘಟ್ಟವಾಗಿದ್ದು, ಆರೋಪಿಗೆ ಯಾವ ಶಿಕ್ಷೆ ಪ್ರಕಟವಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags:

error: Content is protected !!