ರಾಜ್ಯದಲ್ಲಿ ಭೀಕರ ಬರಗಾಲ ಮತ್ತು ಆರ್ಥಿಕ ಸಂಕಷ್ಟದ ನಡುವೆಯೂ ಸಿಎಂ ಮನಸೋಇಚ್ಛೆ ಘೋಷಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆ, ಹಿರಿಯೂರು ಉಪಚುನಾವಣೆ ಹಾಗೂ ರವಿ ಹಂಜ್ ವಿವಾದದ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ, ಆದರೆ ಕಾಂಗ್ರೆಸ್ ಸರ್ಕಾರ ಕೇವಲ ಜಾಹೀರಾತುಗಳ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರಸ್ತೆ ಗುಂಡಿ ಮುಚ್ಚಿಲ್ಲ ಹಾಗೂ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಆದರೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ ತೆರೆಯುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ, ಭಾರತ್ ಜೋಡೋ ಸಂಯೋಜಕರು ಹಾಗೂ ಬೋರ್ಡ್ ಅಧ್ಯಕ್ಷರನ್ನು ನೇಮಿಸಿ ಕ್ಯಾಬಿನೆಟ್ ದರ್ಜೆ ನೀಡಲಾಗಿದೆ. ಮಂಗಳೂರಿಗೆ 32 ಸಾವಿರ ಕೋಟಿ, ರಸ್ತೆ ಅಭಿವೃದ್ಧಿಗೆ 16 ಸಾವಿರ ಕೋಟಿ ಘೋಷಿಸುವ ಸಿಎಂಗೆ, ನಿರಂತರ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ 350 ಕೋಟಿ ರೂಪಾಯಿ ನೀಡಲು ಆಗುತ್ತಿಲ್ಲ. ಪ್ರಜಾಸೇವಕ ಎನ್ನುವ ಸಿಎಂ ಬರಗಾಲದ ಸಮಯದಲ್ಲಿ ತಮ್ಮ ಮನೆ ಶೃಂಗಾರಕ್ಕೆ 100 ಕೋಟಿ ರೂಪಾಯಿ ಖರ್ಚು ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮುಂದುವರಿದು ಮಾತನಾಡಿದ ವಿಜಯೇಂದ್ರ, ಇತ್ತೀಚಿನ ಪರಿಷತ್ ಚುನಾವಣೆಯಲ್ಲಿ ಮತದಾರರು ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದ್ದು, ಮುಂಬರುವ ಹಿರಿಯೂರು ಉಪಚುನಾವಣೆಯಲ್ಲೂ ಎನ್‌ಡಿಎ ಸಹಮತದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಡುಗೊಲ್ಲ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ಹಿರಿಯೂರು ನೀರಾವರಿಗೆ ಅನುದಾನ ಕೊಟ್ಟಿದ್ದು ಯಡಿಯೂರಪ್ಪ ಸರ್ಕಾರವೇ ಹೊರತು ಕಾಂಗ್ರೆಸ್ ಅಲ್ಲ; ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು. ಇದೇ ವೇಳೆ, ಅಣ್ಣ ಬಸವಣ್ಣನವರ ಬಗ್ಗೆ ಅವಹೇಳನ ಮಾಡಿ ಸಮಾಜದ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿರುವ ಲೇಖಕ ರವಿ ಹಂಜ್ ಅವರನ್ನು ಕೇವಲ ಬಂಧಿಸಿ ಬಿಡುವ ನಾಟಕವಾಡದೆ, ನಾಡಿನ ದಾರ್ಶನಿಕರಿಗೆ ಅವಮಾನವಾಗದಂತೆ ಗೃಹ ಸಚಿವರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
