ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ರಾಜ್ಯದ ನೇಕಾರರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 3ರಂದು ಸುವರ್ಣಸೌಧದ ಎದುರು ಬೃಹತ್ ಧರಣಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘ ತಿಳಿಸಿದೆ.

ವೃತ್ತಿಪರ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ವತಿಯಿಂದ ಗುರುವಾರ, ಡಿಸೆಂಬರ್ 3ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ. ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಇಲಾಖೆಗೆ ಕನಿಷ್ಠ ₹1,500 ಕೋಟಿ ಅನುದಾನ ಬಿಡುಗಡೆ ಮಾಡಿ, ಇಲಾಖೆಯಲ್ಲಿ ಖಾಲಿ ಇರುವ 55 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕಟ್ಟಕಡೆಯ ನೇಕಾರರಿಗೂ ಯೋಜನೆಗಳನ್ನು ತಲುಪಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ.

ನೇಕಾರರಿಗೆ ಕಟ್ಟಡ ಕಾರ್ಮಿಕರ ಮಾದರಿಯ ಸೌಲಭ್ಯ ಮತ್ತು ಗುರುತಿನ ಚೀಟಿ ವಿತರಣೆ, ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ನೇಕಾರರ ಸಾಲ ಸಂಪೂರ್ಣ ಮನ್ನಾ ಹಾಗೂ 55 ವರ್ಷ ಮೇಲ್ಪಟ್ಟ ನೇಕಾರರಿಗೆ ಮಾಸಿಕ ಕನಿಷ್ಠ ₹5,000 ಮಾಸಾಶನ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅಲ್ಲದೆ, ಆತ್ಮಹತ್ಯೆ ಮಾಡಿಕೊಂಡ ನೇಕಾರರ ಬಾಕಿ ಉಳಿದ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದು, ‘ನೇಕಾರ ಸಮ್ಮಾನ್’ ಯೋಜನೆ ಮೊತ್ತವನ್ನು ₹10,000 ಕ್ಕೆ ಏರಿಸುವುದು ಹಾಗೂ ಶೂನ್ಯ ಬಡ್ಡಿದರದ ಸಾಲದ ಮಿತಿಯನ್ನು ₹2 ಲಕ್ಷದಿಂದ ₹5 ಲಕ್ಷಕ್ಕೆ ಹೆಚ್ಚಿಸಿ ಜಿಎಸ್ಟಿ ಮುಕ್ತಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸಂಘ ಎಚ್ಚರಿಸಿದೆ.
ಈ ವೇಳೆ ಚೇತನ್ ಮಾನ್ವಿ, ಬಸವರಾಜ್ ಜಮಖಂಡಿ, ಗಂಗಪ್ಪ ವಂಟಗೂಡಿ, ಸಂಗಪ್ಪ ಊದಗಟ್ಟಿ, ರಾಜೇಂದ್ರ ಮಿರ್ಜಿ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.
