State

ಸಿಎಂ ಭರವಸೆ ಮೇಲೆ ವಿಶ್ವಾಸವಿಡಬೇಕಲ್ಲವೇ

Share

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳೇ ಖುದ್ದಾಗಿ ಭರವಸೆ ನೀಡಿರುವುದರಿಂದ ಅವರ ಮಾತಿನ ಮೇಲೆ ವಿಶ್ವಾಸವಿಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಜಿ. ಪರಮೇಶ್ವರ್, ಆಶಾ ಕಾರ್ಯಕರ್ತೆಯರು ಲಿಖಿತ ಭರವಸೆಗೆ ಪಟ್ಟು ಹಿಡಿಯದೆ ಸರ್ಕಾರದ ಮೇಲೆ ನಂಬಿಕೆ ಇಡಬೇಕು, ನವೆಂಬರ್ 25ರ ಸಂಜೆ ಮುಖ್ಯಮಂತ್ರಿಗಳು ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಮನವಿ ಸಲ್ಲಿಸಿ ₹22 ಸಾವಿರ ಕೋಟಿ ಪರಿಹಾರ ಕೇಳಿದ್ದರೂ ಕಳೆದ ಎರಡು ತಿಂಗಳಿನಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರ ಸಂಕಷ್ಟದ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡಬಾರದು ಎಂದ ಪರಮೇಶ್ವರ್, ಶೀಘ್ರದಲ್ಲೇ ಪರಿಹಾರ ಬಿಡುಗಡೆ ಮಾಡದಿದ್ದರೆ ಈ ಹಿಂದೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಂತೆ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಎಚ್ಚರಿಸಿದರು.

ಇನ್ನು ರಾಜ್ಯ ಸರ್ಕಾರದಿಂದ ಅರ್ಹ ರೈತರಿಗೆ ಘೋಷಿಸಿರುವ ತಲಾ ₹5 ಸಾವಿರ ಪರಿಹಾರ ಹಣವನ್ನು ಅಧಿವೇಶನ ಆರಂಭಕ್ಕೂ ಮುನ್ನವೇ ಎಲ್ಲಾ ಜಿಲ್ಲೆಗಳ ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು. ಮತ್ತೊಂದೆಡೆ, ಲೇಖಕ ರವಿ ಹಂಜ್ ಅವರ ಪುಸ್ತಕ ಮುಟ್ಟುಗೋಲು ಹಾಗೂ ಸರ್ಕಾರಕ್ಕೆ ಹಾಕಿರುವ ಸವಾಲಿನ ಕುರಿತು ಪ್ರತಿಕ್ರಿಯಿಸಿದ ಅವರು, ವಿವಿಧ ಸಮುದಾಯಗಳ ಆಕ್ಷೇಪದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚಿಸಿಯೇ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದರು. ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿರುವ ರವಿ ಹಂಜ್ ಅವರಿಗೆ ಈ ದೇಶದ ಕಾನೂನುಗಳ ಬಗ್ಗೆ ಮತ್ತೊಮ್ಮೆ ನೆನಪಿಸಬೇಕಾಗುತ್ತದೆ ಎಂದು ಪರಮೇಶ್ವರ್ ಖಾರವಾಗಿ ತಿರುಗೇಟು ನೀಡಿದರು.

Tags:

error: Content is protected !!