ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇತ್ತ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಮೂಲಕ ಸರ್ಕಾರ ತನ್ನ ಖಜಾನೆ ತುಂಬಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.ಬೆಲೆ ಏರಿಕೆಯ ಬಿಸಿಗೆ ತತ್ತರಿಸಿದ ಜನಸಾಮಾನ್ಯರು… ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ!
ಹೌದು, ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ಕೈಗೊಂಡರು.

ಹಾಲಿನ ದರ ಏರಿಕೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ, ಬಸ್ ಪ್ರಯಾಣ ದರ ಹೆಚ್ಚಳ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಕಾರಣಕ್ಕೆ ಜನರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಹೊರೆ ಹಾಕಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.
ಅಲ್ಲದೆ, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಒಟ್ಟಿನಲ್ಲಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹಾಗೂ ಬೆಲೆ ಏರಿಕೆಯ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ನಾಯಕರು, ಜನಸಾಮಾನ್ಯರ ಜೇಬಿಗೆ ಕೈ ಹಾಕುತ್ತಿರುವ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿ ಪಕ್ಷದ ಬಾವುಟ ಹಾರಿಸಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
